ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ;
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೨೦; ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಒಳ್ಳೆಯ ಹೆಸರು ತರುವ ಕೆಲಸ ಮಾಡೋಣ ಎಂದು ನೂತನ ಸಂಸದ ಗೋವಿಂದ ಕಾರಜೋಳ ಆಶಯ ವ್ಯಕ್ತಪಡಿಸಿದರು.ಸಂಸದರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಆಡಳಿತ ಎಂಬ ಎತ್ತಿನ ಬಂಡಿ ಎರಡು ಗಾಲಿಗಳಿದ್ದಂತೆ, ಎರಡೂ ಚಕ್ರಗಳು ಸಮನಾಗಿ ಸಾಗಿದಾಗ ಮಾತ್ರ ಬಂಡಿ ಸುಗಮವಾಗಿ ಸಾಗಲು ಸಾಧ್ಯ.  ಅದೇ ರೀತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಆಡಳಿತ ಸುಗಮ ಹಾಗೂ ಉತ್ತಮವಾಗಿ ನಡೆಸಲು ಸಾಧ್ಯವಾಗುತ್ತದೆ.  ಹೀಗಾಗಿ ಎಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ಸಮನ್ವಯತೆಯಿಂದ ಕೆಲಸ ಮಾಡೋಣ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡೋಣ.   ಇದಕ್ಕೆ ಎಲ್ಲ ಅಧಿಕಾರಿಗಳ ಸಹಕಾರ ಕೋರುತ್ತೇನೆ ಎಂದು ಆಶಯ ವ್ಯಕ್ತಪಡಿಸಿದ ಸಂಸದರು, ಲೋಕಸಭೆ ಚುನಾವಣೆಯನ್ನು ಎಲ್ಲ ಅಧಿಕಾರಿಗಳು ಒಟ್ಟುಗೂಡಿ ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಅಲ್ಲದೆ, ಸರ್ಕಾರಿ ನೌಕರರು ಬಹಳಷ್ಟು ಸಂಖ್ಯೆಯಲ್ಲಿ ನಮಗೆ ಮತ ಚಲಾಯಿಸಿದ್ದು, ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದರು.