371(ಜೆ) ಕಾಯ್ದೆಗೆ ವಿರೋಧ: ಪ್ರತಿ ಹೋರಾಟಕ್ಕೆ 22ಕ್ಕೆ ಸಭೆ
ಬೀದರ್: ಜೂ.20:ಬೆಂಗಳೂರಿನ ಹಸಿರು ಪ್ರತಿಷ್ಠಾನವು ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಪ್ರತಿ ಹೋರಾಟ ಸಂಘಟಿಸಲು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಜೂನ್ 22 ರಂದು ಬೆಳಿಗ್ಗೆ 11ಕ್ಕೆ ಇಲ್ಲಿಯ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ವಿಶೇಷ ಸಭೆ ಹಮ್ಮಿಕೊಳ್ಳಲಾಗಿದೆ.
ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಸ್ಮಿತೆ, ವಿಶೇಷ ಸ್ಥಾನಮಾನ ಉಳಿವು ಹಾಗೂ ಹಸಿರು ಪ್ರತಿಷ್ಠಾನಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಹೋರಾಟದ ರೂಪು ರೇಷೆ ಸಿದ್ಧಪಡಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ 371(ಜೆ) ತಿದ್ದುಪಡಿ ಕಾಯ್ದೆ ಜಾರಿಯಿಂದಾಗಿ ರಾಜ್ಯದ ಬಹುತೇಕ ಹುದ್ದೆ ಹಾಗೂ ಶೈಕ್ಷಣಿಕ ಪ್ರವೇಶಗಳು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪಾಲಾಗುತ್ತಿವೆ. ಇದರಿಂದ ಉಳಿದ 24 ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಬೆಂಗಳೂರಿನ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ನಡೆಸುತ್ತಿದ್ದಾರೆ. 24 ಜಿಲ್ಲೆಗಳ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹಸಿರು ಪ್ರತಿಷ್ಠಾನದವರು ಪ್ರತಿಭಟನೆ ನಡೆಸಿ ಕಲ್ಯಾಣ ಕರ್ನಾಟಕ ಭಾಗದ ಜನರ ಹಕ್ಕಿಗೆ ಚ್ಯುತಿ ತರುತ್ತಿರುವುದನ್ನು ತೀವ್ರವಾಗಿ ಖಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳ ಹಿತ ಕಾಪಾಡಲು 371(ಜೆ) ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಕ್ಕೆ ಪ್ರತಿಯಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಹೋರಾಟಗಾರರು, ಜಿಲ್ಲೆಯ ಮಠಾಧೀಶರು, ಶಿಕ್ಷಣ ಸಂಸ್ಥೆ, ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಗಣ್ಯರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.