ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಒತ್ತಾಯ
ಕಲಬುರಗಿ,ಜೂ.19-ಇಂದಿರಾ ಕ್ಯಾಂಟೀನ್‍ಗಳನ್ನು ಪುನರಾರಂಭ ಮಾಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷ, ನ್ಯಾಯವಾದಿ ಎಂ.ಎ.ಖದೀರ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್‍ಗಳನ್ನು ಪ್ರಾರಂಭಿಸಿತ್ತು. ಇದರಿಂದ ಕೂಲಿ ಕಾರ್ಮಿಕರಿಗೆ, ಮಹಿಳೆಯರಿಗೆ, ಸಾರ್ವಜನಿಕರಿಗೆ ಮತ್ತು ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಿತ್ತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್‍ಗಳನ್ನು ಬಂದ್ ಮಾಡಿತ್ತು. 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಇಂದಿರಾ ಕ್ಯಾಂಟೀನ್‍ಗಳನ್ನು ಪುನರಾರಂಭಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಇಂದಿರಾ ಕ್ಯಾಂಟೀನ್‍ಗಳನ್ನು ಪುನರಾರಂಭಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ 8 ಇಂದಿರಾ ಕ್ಯಾಂಟೀನ್‍ಗಳಿದ್ದು, ಇಲ್ಲಿಯವರೆಗೆ ಪುನರಾರಂಭ ಮಾಡಿಲ್ಲ. ಬಂದ್ ಆಗಿರುವ ಇಂದಿರಾ ಕ್ಯಾಂಟೀನ್‍ಗಳನ್ನು ಪುನರಾರಂಭ ಮಾಡುವಂತೆ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿಪತ್ರ ಸಲ್ಲಿಸಲಾಗಿತ್ತು. ಆದರೂ ಸಹ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
30 ದಿನಗಳ ಒಳಗಾಗಿ ಇಂದಿರಾ ಕ್ಯಾಂಟೀನ್‍ಗಳನ್ನು ಪುನರಾರಂಭಿಸದಿದ್ದಲ್ಲಿ ಮಹಾನಗರ ಪಾಲಿಕೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಿದ್ದಣ್ಣ ಚಕರಾ, ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್, ಜಿಲ್ಲಾ ಕಾರ್ಯದರ್ಶಿ ಸೈಯ್ಯದ್ ಮುನೀರ್, ಅಬ್ದುಲ್ ಸಲೀಂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.