ಮಹನೀಯರ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ- ಬಿ.ಟಿ. ಕುಮಾರಸ್ವಾಮಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೧೯; ಇದೇ ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಜುಲೈ 02 ರಂದು ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹನೀಯರ ಜಯಂತಿ ಆಚರಿಸುವ ಸಂಬಂಧ ಅಗತ್ಯ ಸಿದ್ಧತೆ ಕೈಗೊಳ್ಳುವ ಕುರಿತು ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದೊಂದಿಗೆ ಶಿಷ್ಟಾಚಾರದ ಅನುಸಾರ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಆಚರಿಸಲು ತೀರ್ಮಾನಿಸಲಾಯಿತು.
ಜೂ. 27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ: ಇದೇ ಜೂನ್ 27 ರಂದು ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರ ಅಥವಾ ಜಿಲ್ಲಾಧಿಕಾರಿಗಳ ಕಚೇರಿ ಈ ಎರಡೂ ಸ್ಥಳಗಳಲ್ಲಿ ಯಾವುದಾದರೂ ಒಂದು ಸ್ಥಳದಲ್ಲಿ  ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ನಡೆಸಲು ಚರ್ಚಿಸಲಾಯಿತು. ಕಾರ್ಯಕ್ರಮ ನಡೆಯುವ ಸ್ಥಳದ ಕುರಿತು ಹಾಗೂ ಕೆಂಪೇಗೌಡರ ಕುರಿತು ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಒಂದೆರೆಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಸಮಾಜದ ಮುಖಂಡರು ತಿಳಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಸರ್ಕಾರದ ಶಿಷ್ಟಾಚಾರದ ಅನುಸಾರ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು. ಸಂಗೀತ ಕಾರ್ಯಕ್ರಮ ಆಯೋಜನೆ ಸೇರಿದಂತೆ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಜಗನ್ನಾಥ್, ಉಪಾಧ್ಯಕ್ಷ ಮಂಜುಕುಮಾರ್, ನಿರ್ದೇಶಕರಾದ ರಂಗಧಾಮಯ್ಯ ಆರ್.ಪರಮೇಶ್ವರ, ಆರ್.ಚಿದಾನಂದಪ್ಪ, ನರೇಂದ್ರ ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.