ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎಸ್‍ಯುಸಿಐ ಪ್ರತಿಭಟನೆ
ಕಲಬುರಗಿ,ಜೂ.18-ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಎಸ್‍ಯುಸಿಐ(ಸಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ನಾಯಕರಾದ ಎಂ.ಶ್ರೀಧರ್ ಅವರು, ಚುನಾವಣೆ ಮುಗಿಯುತ್ತಿದ್ದಂತೆಯೇ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿ ಲೀಟರ್‍ಗೆ ತಲಾ 3 ರೂ.ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಎಸ್‍ಯುಸಿಐ ಪಕ್ಷ ಖಂಡಿಸುತ್ತದೆ. ಇದರಿಂದ ಸರಕು ಸಾಗಾಣಿಕೆ ವೆಚ್ಚ ಏರಿಕೆಯಾಗಿ ಬೆಲೆ ಏರಿಕೆಯ ಮೇಲೆ ಪರಿಣಾಮ ಉಂಟಾಗಲಿದೆ. ತರಕಾರಿ, ದಿನಸಿ ಬೆಲೆ ಏರಿಕೆಯಿಂದ ಕಂಗಾಲಾದ ಜನತೆಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾ ನಾಯಕರಾದ ವಿ.ನಾಗಮ್ಮಾಳ್ ಅವರು ಮಾತನಾಡಿ, ಬಿಜೆಪಿ ಸರ್ಕಾರದ ದಾರಿಯಲ್ಲಿ ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡ ಜನ ವಿರೋಧಿ ತೀರ್ಮಾನ ಕೈಗೊಂಡಿದೆ. ಬೆಲೆ ಏರಿಕೆ ಕುರಿತು ಮಾತನಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಈ ಕ್ರಮವು ತಮಗೆ ಮಾಡಿದ ವಂಚನೆಯೆಂದು ಜನತೆ ಭಾವಿಸುವಂತಾಗಿದೆ. ಆದ್ದರಿಂದ ಸರ್ಕಾರ ತಕ್ಷಣವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಮಹೇಶ ನಾಡಗೌಡ, ಎಸ್.ಎಂ.ಶರ್ಮಾ, ಮಹೇಶ್ ಎಸ್.ಬಿ., ಡಾ.ಸೀಮಾ ದೇಶಪಾಂಡೆ, ಸಂತೋಷ ಹಿರವೆ, ಹಣಮಂತ ಎಸ್.ಹೆಚ್., ವೆಂಕಟೇಶ, ಗೋವಿಂದ ಸೇರಿದಂತೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.