ತೇಲ್ಕೂರ್ ಆರೋಪ ಸತ್ಯಕ್ಕೆ ದೂರ: ಶರಣು ಮೋದಿ
ಕಲಬುರಗಿ,ಸೆ.25: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಮಾಡ್ಯುಲರ್ ಆಪರೇಷನ್ ಥಿಯೇಟರ್ ಗಳಿಗೆ ಉಪಕರಣಗಳ ಖರೀದಿ ಹೆಸರಿನಲ್ಲಿ ಅವ್ಯವಹಾರ ನಡೆದಿರುವುದಾಗಿ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ಶರಣಕುಮಾರ್ ಮೋದಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಮಾಡ್ಯುಲರ್ ಆಪರೇಷನ್ ಥಿಯೇಟರ್ ಗಳಿಗೆ ಉಪಕರಣಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದಿರುವ ಸೇಡಂ ಮಾಜಿ ಶಾಸಕ ತೇಲ್ಕೂರ್ ಹೇಳಿಕೆ ಅತ್ಯಂತ ಬೇಸರ ಮೂಡಿಸುವಂತಿದೆ ಎಂದಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಗೆ ಡಾ.ಶರಣಪ್ರಕಾಶ್ ಪಾಟೀಲ್ ಅವರು ಸಚಿವರಾದ ಬಳಿಕ ಇಲಾಖೆಯಲ್ಲಿ ಸಾಕಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಪೈಕಿ ಕಲಬುರಗಿ ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದ ಕೀರ್ತಿ ಶರಣಪ್ರಕಾಶ್ ಪಾಟೀಲ್ ಅವರಿಗೆ ಸಲ್ಲುತ್ತದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಕಲಬುರಗಿ ನಗರದಲ್ಲಿ ಗುಲ್ಬರ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಜಿಮ್ಸ್) ಆರಂಭಗೊಂಡು ಬಹುತೇಕ ಒಂದು ದಶಕ ಸಮೀಪಿಸುತ್ತಿದ್ದು, ಈ ಅವಧಿಯಲ್ಲಿ ಪ್ರತ್ಯೇಕ ಟ್ರಾಮಾ ಮತ್ತು ತುರ್ತು ಚಿಕಿತ್ಸಾ ವಿಭಾಗ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಗೊಂಡು ಈಗಾಗಲೇ ಜನರಿಗೆ ಅತ್ಯುತ್ತಮವಾದ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಜೊತೆಗೆ, ಕೈಗೆಟುಕುವ ದರಗಳಲ್ಲಿ ಅತ್ಯುತ್ತಮ ಆರೋಗ್ಯ ಸೇವೆಗಳು ಜನರಿಗೆ ಲಭಿಸುತ್ತಿವೆ. ಇದೇ ಕಾರಣಕ್ಕಾಗಿ, ಕಲಬುರಗಿ ನಗರವು ಅತ್ಯುತ್ಕøಷ್ಟ ಆರೋಗ್ಯ ಸೇವೆಗಳ ಗುಚ್ಛವಾಗಿ (ಮೆಡಿಕಲ್ ಹಬ್) ಮಾರ್ಪಟ್ಟಿದೆ. ಡಾ.ಪಾಟೀಲರ ಇಂತಹ ಜನಪರ ಸೇವೆಗಳಿಂದಾಗಿ ಅವರೊಬ್ಬ ಶುದ್ಧಹಸ್ತದ ರಾಜಕಾರಣಿ ಎಂಬುದು ಈಗಾಗಲೇ ರಾಜ್ಯಾದ್ಯಂತ ಮನೆ ಮಾತಾಗಿದೆ. ಈ ಹಿನ್ನೆಲೆಯಲ್ಲಿ ಡಾ.ಶರಣಪ್ರಕಾಶ್ ವರ್ಚಸ್ಸಿಗೆ ಮಸಿ ಬಳಿಯಲು ಬಿಜೆಪಿ ಮುಖಂಡ ತೇಲ್ಕೂರ್ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.
ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಹಾಗೂ ಮೈಸೂರು ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಗಳನ್ನು ಸ್ಥಾಪಿಸಲು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಅಲ್ಲದೆ, ಈ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಟೆಂಡರ್ ಆಹ್ವಾನಿಸಿ ಉಪಕರಣಗಳನ್ನು ಖರೀದಿಸಲಾಗಿದೆ. ಹಾಗಾಗಿ, ಯಾವುದೇ ಅವ್ಯವಹಾರ ನಡೆದಿಲ್ಲ ಎಂದಿದ್ದಾರೆ.