10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆಸಕಲ ಸಿದ್ಧತೆ ಕೈಗೊಳ್ಳಿ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ. ಜೂ. 15: ಜೂನ್ 21 ರಂದು ನಡೆಯುವ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಯೋಜಿಸಲು ಸಕಲ್ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಆಯುಷ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಜೂನ್. 21 ರಂದು ಯೋಗ ಪ್ರದರ್ಶನ ಕಾರ್ಯಕ್ರಮವು ಆಯೋಜಿಸಿದ್ದು, ಅಂದು ಬೆಳಿಗ್ಗೆ 6:30 ಗಂಟೆಗೆ ಎಲ್ಲರೂ ಪೂರ್ವನಿಗಧಿತ ಸಮಯಕ್ಕೆ ಹಾಜರಿರಬೇಕು. ಯೋಗ ಪ್ರದರ್ಶನ ಕಾರ್ಯಕ್ರಮ ಬೆಳಿಗ್ಗೆ 7:15ಕ್ಕೆ ಪ್ರಾರಂಭಗೊಂಡು 8:00 ಗಂಟೆಗೆ ಮುಕ್ತಾಯಗೊಳ್ಳಲಿದೆ. ಅದಕ್ಕೆ ಪೂರ್ವಭಾವಿಯಾಗಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರು, ಸರ್ಕಾರೇತರ ಸಂಘ-ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಬೇಕು ಎಲ್ಲರೂ ಬಿಳಿ ಬಣ್ಣದ ಟೀ ಶರ್ಟ ಧರಿಸಲು ಹೆಚ್ಚಿನ ಆದ್ಯತೆ ನೀಡಬೇಕೆಂದು ಹೇಳಿದರು.
ಸಭೆಯಲ್ಲಿ ಆಯುಷ್ ಇಲಾಖೆಯ ಡಾ.ಆರ್.ಬಿ.ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ, ಕ್ರೀಡಾ ಯುವ ಸಬಲೀಕರಣ ಇಲಾಖೆಯ ಡಾ.ಗೌತಮ ಅರಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾಕರ, ಅಲ್ಪಸಂಖ್ಯಾತರ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.