ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ
ಹುಬ್ಬಳ್ಳಿ, ಜೂ.15: ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ರೈತರು ಈಗ ಬಿತ್ತನೆ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಸರಿಸುಮಾರು ಶೇ. 70 ರಿಂದ 80 ರಷ್ಟು ಬಿತ್ತನೆ ಮಾಡಲಾಗಿದೆ. ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕರಾದ ಎಂ.ಆರ್.ಪಾಟೀಲ ಹೇಳಿದರು.
ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ಕುಂದಗೋಳ ಮತಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ)ಯನ್ನುದ್ದೇಶಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹೊಸದಾಗಿ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸುವ ಕುರಿತು ಆನ್‍ಲೈನ್ ವೆಬ್‍ಸೈಟ್ ತೆರೆದಿರುವುದಿಲ್ಲ. ಅಲ್ಲದೇ ಈ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರವೇಶಗಳು ದೊರೆಯಬೇಕು. ಈ ಕುರಿತು ಅಧಿವೇಶನದಲ್ಲಿ ಪ್ರಶ್ನೆ ಮಾಡಿದ್ದೆ. ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಜೊತೆಗೆ ಈ ವಿಷಯದ ಕುರಿತು ಮಾತನಾಡಿದ್ದೇನೆ ಎಂದು ಶಾಸಕರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹುಬ್ಬಳ್ಳಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಸದಾನಂದ ಅಮರಾಪುರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುರೇಶ ಗುರಣ್ಣವರ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಅಕ್ಷರ ದಾಸೋಹ ಯೋಜನೆಯ ಎಸ್.ವಿ. ಬಂಗಾರಿಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.