ಜೂ.27ರಂದು ನಗರದಲ್ಲಿ ಕೆಂಪೇಗೌಡ ಜಯಂತಿ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.15:- ಶ್ರೀ ಕೆಂಪೇಗೌಡರ ಜಯಂತಿಯನ್ನು ಜೂ.27ರಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೆಂಪೇಗೌಡ ಅವರಿಗೆ ಜಯಂತಿ ಆಚರಿಸುವುದರ ಮೂಲಕ ಅವರ ಕೊಡುಗೆ ಹಾಗೂ ಸಾಧನೆಗೆ ಬೆಲೆಕಟ್ಟಲು ಆಗುವುದಿಲ್ಲ. ಆದರೂ ಅವರ ಆದರ್ಶಗಳನ್ನು ಪಾಲಿಸಿ ಅದಕ್ಕೆ ಮೆರುಗು ತರುವಂತೆ ಜಯಂತಿ ಆಚರಿಸಲಾಗುವುದು ಎಂದು ಹೇಳಿದರು.
ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮವಹಿಸಲಾಗುವುದು. ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಮಾತನಾಡಿ, ಕಾರ್ಯಕ್ರಮದಲ್ಲಿ ಕಲಾತಂಡಗಳಿಂದ ಗೀತ ಗಾಯನ ಏರ್ಪಡಿಸಲಾಗುವುದು. ಆಹ್ವಾನ ಪತ್ರಿಕೆಯ ಮುದ್ರಣ ಮಾಡಿ ಸರ್ಕಾರದ ಶಿಷ್ಟಾಚಾರದಂತೆ ಜನ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬಂಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕೆಂಪೇಗೌಡ ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.