ರಾಜ್ಯದಲ್ಲಿ ಒಂದು ವಾರ ಮಳೆ
ಬೆಂಗಳೂರು,ಜೂ.೧೨-ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ. ಹವಾಮಾನ ಇಲಾಖೆಯು ಇಂದಿನಿಂದ ದಿ.೧೭ ರವರೆಗೆ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದೆ, ಇಂದಿನಿಂದ ರಾಜ್ಯದಲ್ಲಿ ಮುಂಗಾರು ತೀವ್ರಗೊಳ್ಳುವ ಸಾಧ್ಯತೆಯಿದೆ.
ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮುಂಗಾರು ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ, ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ರಾಜ್ಯದ ೧೧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ೨೪ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ನಗರದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ತಾಪಮಾನ ೨೧ ಡಿಗ್ರಿಗೆ ಇಳಿಯಲಿದ್ದು, ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಜೂನ್ ೧೨ ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ ೩೦-೪೦ ಕಿ.ಮೀ) ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಒಳ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದೇಶವು ಪ್ರಸ್ತುತ ಎರಡು ರೀತಿಯ ಹವಾಮಾನವನ್ನು ಎದುರಿಸುತ್ತಿದೆ. ಒಂದೆಡೆ ಉತ್ತರ ಭಾರತ ತೀವ್ರ ಬಿಸಿಲಿನ ವಾತಾವರಣವನ್ನು ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಮಾನ್ಸೂನ್ ಮಳೆಯಾಗುತ್ತಿದೆ.