ಕಲುಷಿತ ನೀರು ಸೇವನೆ: ೬೦ಕ್ಕೂ ಅಧಿಕ ಮಂದಿ ಅಸ್ವಸ್ಥ
ಮಧುಗಿರಿ, ಜೂ. ೧೨- ಕಲುಷಿತ ನೀರು ಸೇವಿಸಿದ ಸುಮಾರು ೬೦ಕ್ಕೂ ಅಧಿಕ ಮಂದಿ ವಾಂತಿ-ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಬ್ಬದ ಸಂಭ್ರಮ ಏರ್ಪಟ್ಟಿತ್ತು. ಆದರೆ ಗ್ರಾಮದಲ್ಲಿನ ಕೊಳವೆ ಬಾವಿಯ ನೀರು ಸೇವಿಸಿ ಗ್ರಾಮದ ಜನರಿಗೆ ವಾಂತಿ ಭೇದಿಯಿಂದ ಅಸ್ವಸ್ಥರಾಗಿ ಬಳಲುತ್ತಿದ್ದು, ಕೆಲವರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದರೆ ಮತ್ತೆ ಕೆಲವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಚಿನ್ನೇನಹಳ್ಳಿಯ ಓವರ್ ಹೆಡ್ ಟ್ಯಾಂಕ್ ಮತ್ತು ಶುದ್ಧ ನೀರಿನ ಘಟಕದ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ. ಅವರನ್ನು ತಕ್ಷಣಕ್ಕೆ ಮಿಡಿಗೇಶಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮಧುಗಿರಿ ಸಾರ್ವಜನಿಕ ಆಸ್ಪತ್ರೆ , ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಶುದ್ಧ ನೀರಿನ ಘಟಕ ಮತ್ತು ಓವರ್ ಹೆಡ್ ಟ್ಯಾಂಕ್ ನೀರನ್ನು ಜಿಲ್ಲಾ ಪರೀಕ್ಷೆ ಕೇಂದ್ರಕ್ಕೆ ಕಳುಹಿಸಲಾಗಿದೆ. ೨೪ ಗಂಟೆ ನಂತರ ವರದಿ ಬರಲಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್ ತಿಳಿಸಿದರು.
ಚಿನ್ನೇನಹಳ್ಳಿ ಗ್ರಾಮಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಬೇಕು. ಓವರ್ ಹೆಡ್ ಟ್ಯಾಂಕ್ ಮತ್ತು ಗ್ರಾಮದ ಚರಂಡಿಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳುವಂತೆ ತಿಳಿಸಲಾಗಿತ್ತು. ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಈಗಾಗಲೇ ಚಿನ್ನೇನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದಿದ್ದು, ಗ್ರಾಮಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದಲ್ಲಿ ಡಿಹೆಚ್‌ಓ , ಉಪವಿಭಾಗಾಧಿಕಾರಿ, ಟಿಹೆಚ್‌ಓ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಬೀಡು ಬಿಟ್ಟಿದ್ದು, ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದ್ದಾರೆ.