ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಎಐಡಿಎಸ್‍ಓ ಪ್ರತಿಭಟನೆ
ಕಲಬುರಗಿ,ಜೂ.10-ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‍ಓ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‍ಓ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಎಚ್.ಅವರು, ನೀಟ್ ಪರೀಕ್ಷೆ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಎಐಡಿಎಸ್‍ಓ ಜಿಲ್ಲಾ ಕಾರ್ಯದರ್ಶಿ ತುಳಜಾರಮ ಎನ್.ಕೆ.ಮಾತನಾಡಿ, ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಎಐಡಿಎಸ್‍ಓ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ, ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ನಾಗರಾಜ ರಾವುರ, ಸದಸ್ಯರಾದ ಸಿದ್ಧಾರ್ಥ ತಿಪ್ಪನೋರ, ಯುವರಾಜ ರಾಠೋಡ್, ಪೂಜಾ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.