ದಿ. 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಬಾಗಲಕೋಟೆ,ಜೂ10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆಯುಷ ಇಲಾಖೆ ಸಹಯೋಗದಲ್ಲಿ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಯೋಗ ಪ್ರಾತ್ಯಕ್ಷಿಕೆ ಜರುಗಲಿದೆ. ಸದರಿ ಕಾರ್ಯಕ್ರಮದಲ್ಲಿ ಯೋಗ ನಿರತ ಸಂಘ ಸಂಸ್ಥೆಗಳು, ಎನ್‍ಸಿಸಿ ಕೆಡೆಟ್, ಹೋಮ್‍ಗಾಡ್ರ್ಸ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಎನ್‍ವಾಯ್.ಕೆ, ಸೇವಾದಳದವರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ಜಿಲ್ಲಾದಿಕಾರಿಗಳು ತಿಳಿಸಿದರು.
ಜಿಲ್ಲಾ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಬರುವ ಶಾಲೆಯ ಮಕ್ಕಳನ್ನು ಈ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಲಾಯಿತು. ನವನಗರದ ವ್ಯಾಪ್ತಿಯ ವಿವಿಧ ಇಲಾಖೆಯಡಿಯಲ್ಲಿರುವ ವಸತಿ ಶಾಲೆಗಳ ಮಕ್ಕಳೂ ಸಹ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪ್ರೋಟೋಕಾಲ್ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಮಾಡಲು ತಿಳಿಸಲಾಯಿತು. ಜಿಲ್ಲಾ ಕ್ರೀಡಾಂಗಣವನ್ನು ಸ್ವಚ್ಛವಾಗಿಡುವಂತೆ ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು. ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಯೋಗ ಮಾಡಲು ಸಡಿಲು ಬಿಳಿ ಬಣ್ಣದ ಬಟ್ಟೆ, ಟ್ರ್ಯಾಶೂಟ್ ಹಾಗೂ ಹಾಸಿಗೆ ತರುವಂತೆ ಸಭೆಯಲ್ಲಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಚಾರದ ಕರಪತ್ರ ಹಾಗೂ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.
ಜಿಲ್ಲಾ ಆಯುಷ್ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ ಕಾರ್ಯಕ್ರಮದ ರೂಪು-ರೇಶೆಗಳ ಬಗ್ಗೆ ವಿವರಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ನಿರೂಪನಾಧಿಕಾರಿ ಅಮರೇಶ ಎಚ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಆಯುಷ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಸಿ.ಪಿ.ರಕ್ಕಸಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.