ಹೈಕೋರ್ಟ್ ತೀರ್ಪಿನ ಹಿಂದೆ ಕೇಂದ್ರ ಬಿಜೆಪಿ ಕುತಂತ್ರ-ಆಕ್ರೋಶ
ಸಂಜೆವಾಣಿ ನ್ಯೂಸ್
ಮೈಸೂರು: ಸೆ.25:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿನ ಹಿಂದೆ ಕೇಂದ್ರ ಬಿಜೆಪಿ ಕುತಂತ್ರ ಇದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷ ಬಿ.ಸುಬ್ರಮಣ್ಯ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಹಳೆ ನ್ಯಾಯಾಲಯದ ಮುಂಭಾಗ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿರೋಧ ಪಕ್ಷದ ನಾಯಕರ ಹಗೆತನವನ್ನು ಖಂಡಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಶೋಷಿತ ಸಮುದಾಯಗಳ ವರ್ಗ ನಡೆಸಿದ ಪ್ರತಿಭಟನೆ ನೇತೃತ್ವ ವಹಿಸಿ ಅವರು ಮಾತನಾಡಿದರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17 ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ.
ಇಂತಹ ಬಿಜೆಪಿ-ಜೆಡಿಎಸ್ ನ ಪಿತೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ಸಂಚು, ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ಸಿದ್ದರಾಮಯ್ಯನವರು ಹೆದರುವುದಿಲ್ಲ. ರಾಜ್ಯದ ಜನತೆ ಪಕ್ಷದ ಹೈಕಮಾಂಡ್, ಶಾಸಕ, ಸಚಿವರು ಸಿದ್ದರಾಮಯ್ಯ ಜೊತೆಗಿದ್ದಾರೆಂದರು. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ಸಿದ್ದರಾಮಯ್ಯನವರ ಮೇಲಷ್ಟೇ ಅಲ್ಲ. ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಮೇಲೆ ಸೇಡಿನ ರಾಜಕೀಯ ಮಾಡುತ್ತಿದ್ದಾರೆ ಎಂದರು.