ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಿ: ಡಿಸಿ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.08:- ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಬೇಕಿದ್ದು, ಇದಕ್ಕಾಗಿ ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮನವಿ ಮಾಡಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಕಾರ್ಯ ಪಡೆ (ಟಾಸ್ಕ್ ಫೆÇೀರ್ಸ್) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಮ್ಮ ಸುತ್ತಮುತ್ತಲೂ ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಬಹುದಾಗಿದ್ದು, ಮೈಸೂರನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಿ ಇತರರಿಗೂ ಪ್ರೇರಣೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸಲಹೆ ನೀಡಿದರು.
ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸುವ ಸ್ವಯಂ ಸೇವಾ ಸಂಸ್ಥೆಗಳಿಗೆ ಬಾಲಮಿತ್ರ ಎಂದು ಪ್ರಮಾಣ ಪತ್ರ ನೀಡಲು ಸೂಚಿಸಿದರು.
ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರನ್ವಯ ಕಲಂ 17ರಡಿ ನೇಮಕಗೊಂಡಿರುವ ಎಲ್ಲಾ ಇಲಾಖೆಗಳು ಮೈಸೂರು ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೊಧಿ ದಿನವನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪ್ರತಿ ವಾರ್ಡ್‍ಗಳಲ್ಲಿಯೂ ಜಾಗೃತಿ ಸಪ್ತಾಹ ಹಮ್ಮಿಕೊಂಡು ಜಿಲ್ಲೆಯಲ್ಲಿರುವ ಪ್ರತಿ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಂತೆ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದಿಲ್ಲವೆಂದು ಧೃಢೀಕರಿಸಿರುವ ಫಲಕಗಳನ್ನು ಹಾಕಲು ಕ್ರಮ ವಹಿಸಿ, ಪರವಾನಗಿ ಪಡೆಯದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಿಸಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಮೈಸೂರು ಉಪ ವಿಭಾಗಾಧಿಕಾರಿ, ಪೆÇಲೀಸ್ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಸರ್ಕಾರೇತರ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.