ತಾಯಿ, ಶಿಶು ಮರಣ ಪ್ರಕರಣಗಳು ಮರುಕಳಿಸಿದರೆ ಶಿಸ್ತು ಕ್ರಮ:ಜಿಲ್ಲಾಧಿಕಾರಿ ಎಚ್ಚರಿಕೆ
ಸಂಜೆವಾಣಿ ವಾರ್ತೆ
ಹೊಸಪೇಟೆ ಜೂ7: ವ್ಯೆದ್ಯರ ನಿರ್ಲಕ್ಷ್ಯ ಅಥವಾ ಆಸ್ಪತ್ರೆಯ ಯಾವುದಾದರು ಸಿಬ್ಬಂದಿಯ ನಿರ್ಲಕ್ಷ್ಯತೆಯಿಂದ ತಾಯಿ ಅಥವಾ ಮಗು ಸಾವಿಗೀಡಾದ ಬಗ್ಗೆ ದೂರು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಎಫ್‍ಐಆರ್ ದಾಖಲಿಸಿ ಸೇವೆಯಿಂದ ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ತಾಯಿ ಮರಣ ಮತ್ತು ಶಿಶು ಮರಣ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಯಿ ಮತ್ತು ಶಿಶು ಮರಣ ತಡೆಗೆ ವಿಶೇಷ ಗಮನ ಹರಿಸಬೇಕು. ತಾಯಿ ಮತ್ತು ಶಿಶು ಮರಣಕ್ಕೆ ವೈದ್ಯರು ಅಥವಾ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎನ್ನುವ ದೂರು ಬಾರದ ಹಾಗೆ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು. ಪ್ರತಿ ದಿನ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೈಕೆಯ ಬಗ್ಗೆ ಗಮನ ಹರಿಸಬೇಕು. ಶುಶ್ರೂಷಣಾ ಸಿಬ್ಬಂದಿ ರೋಗಿಗಳೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳಬೇಕು. ಚಿಕಿತ್ಸೆ ಕೊಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು. ಸಕಾಲದಲ್ಲಿ ಸಿಗಬೇಕಾಗಿದ್ದ ಆರೋಗ್ಯ ಸೇವೆ ಸಿಗದ ಕಾರಣಕ್ಕೆ ತಾಯಿ ಮರಣ, ಶಿಶುಮರಣ ಪ್ರಕರಣಗಳು ದಾಖಲಾಗುತ್ತಿವೆ ಎನ್ನುವ ದೂರುಗಳು ಬಂದಲ್ಲಿ ಮತ್ತು ತಾಯಿ ಮತ್ತು ಶಿಶು ಮರಣ ಪ್ರಕರಣಗಳು ಮತ್ತೆ ಮತ್ತೆ ಮರುಕಳಿಸಿದಲ್ಲಿ ಯಾವುದೇ ಮುಲಾಜಿಲ್ಲದೇ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರಿ ಆಸ್ಪತ್ರೆಗಳಿಗೆ ಬಹುತೇಕ ಕೃಷಿ ಕಾರ್ಮಿಕರು, ಕಡು ಬಡವರೇ ಹೆಚ್ಚಾಗಿ ಬರುತ್ತಾರೆ. ವೈದ್ಯರೇ ದೇವರೆಂದು ಭಾವಿಸಿ ಅವರು ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಪ್ರೀತಿ ವಿಶ್ವಾಸ ಇಟ್ಟುಕೊಂಡಿರುತ್ತಾರೆ. ವೈದ್ಯರು ಏನೇ ಹೇಳಿದರು ಅವರು ಅದಕ್ಕೆ ಸಮ್ಮತಿ ಸೂಚಿಸುತ್ತಾರೆ. ನನ್ನ ಮಗಳು ಆರಾಮಿರಬೇಕು. ಹೆರಿಗೆ ಸುಸೂತ್ರವಾಗಿ ನಡೆದು ಕೂಸು ಬದುಕಬೇಕು ಎಂಬುದು ಪ್ರತಿಯೊಬ್ಬ ತಂದೆ ತಾಯಿ ಪಾಲಕರ ಆಸೆ ಆಗಿರುತ್ತದೆ. ಆಸ್ಪತ್ರೆಗೆ ಯಾರೆ ಬರಲಿ ಅವರೊಂದಿಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ನಡೆದುಕೊಳ್ಳಬೇಕು. ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು. ಹೆರಿಗೆಯಂತಹ ಸಂದರ್ಭದಲ್ಲಿ ವಿಳಂಬ ಮಾಡದೇ ಮೇಲಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಕೂಡಲೇ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರು ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದರು.  ಸರಕಾರಿ ಆಸ್ಪತ್ರೆಗಳಿಗಿಂತ, ಖಾಸಗಿ ಆಸ್ಪತ್ರೆಗಳಲ್ಲಿಯೇ ತಾಯಿ ಮರಣಗಳು ಅತೀ ಹೆಚ್ಚಾಗಿ ಸಂಭವಿಸಿವೆ ಎಂಬುದರ ಬಗ್ಗೆ ವಿಶೇಷ ಗಮನ ಹರಿಸಿ ಪರಿಶೀಲನೆ ನಡೆಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಜಂಬಯ್ಯ ಅವರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು, ವ್ಯೆದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ನೊಂದ ಮಹಿಳೆಯರು ಅವರ ಕುಟುಂಬದವರು ಹಾಜರಿದ್ದರು.