ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಶಿವಶಂಕರ ಹಂಜಿ
ಅಥಣಿ :ಜೂ.6: ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ. ನಮ್ಮ ಮುಂದಿನ ಪೀಳಿಗೆಯ ಆರೋಗ್ಯವಂತ ಜೀವನಕ್ಕೆ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಶಿವಶಂಕರ ಹಂಜಿ ಹೇಳಿದರು.
ಅವರು ಅಥಣಿ ಪಟ್ಟಣದ ಪ್ರತಿಷ್ಠಿತ ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಹಾಗೂ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ಮಕ್ಕಳಿಗೆ ಪರಿಸರ ಸಂರಕ್ಷಣೆಯ ಕುರಿತು ಸಲಹೆ ನೀಡಿದರು. ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಆದ್ದರಿಂದ ನಾವು ಬರಗಾಲದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಸರ್ಕಾರ ಪ್ರತಿಯೊಬ್ಬರಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಆಚರಣೆ ಕೇವಲ ಗಿಡ ನೀಡುವುದಕ್ಕೆ ಸೀಮಿತವಾಗದೆ, ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇಂದು ಶಾಲೆಯ ಆವರಣದಲ್ಲಿ ನೆಟ್ಟಿರುವ ಗಿಡಗಳನ್ನು ದತ್ತು ಪಡೆದುಕೊಂಡು ಸಂರಕ್ಷಣೆ ಮಾಡಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಉಮೇಶ ಪ್ರಧಾನಿ ಮಾತನಾಡಿ ಮಾನವನ ದುರಾಸೆಗೆ ಮತ್ತು ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನದಿಂದ ಪರಿಸರದ ಮೇಲೆ ದುಷ್ಪರಿಣಾಮವಾಗುತ್ತಿದೆ. ಗಿಡಮರಗಳನ್ನು ಹೆಚ್ಚಿಗೆ ಕಡಿಯುತ್ತಿರುವುದರಿಂದ ವಾತಾವರಣದಲ್ಲಿ ಏರಿಳಿತವಾಗುತ್ತಿದೆ. ಇದು ಮಾನವ ಸಂಕುಲಕಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳ ಬದುಕಿಗೆ ದುಷ್ಪರಿಣಾಮ ಬೀರುತ್ತಿದೆ. ಇದೇ ಸ್ಥಿತಿ ಮುಂದುವರೆದರೆ ಮುಂದಿನ ದಿನಮಾನಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಗಿಡಮರಗಳನ್ನು ನೆಟ್ಟು ಅವುಗಳನ್ನು ಸಂರಕ್ಷಣೆ ಮಾಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಲಯಾಧಿಕಾರಿ ಉಮೇಶ ಪ್ರಧಾನಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ವಿಜಯಕುಮಾರ ಬುರ್ಲಿ, ಶ್ರೀಶೈಲ ಸಂಕ ಹಾಗೂ ಮುಖ್ಯೋಪಾಧ್ಯಾಯ ಎಮ್ ಎಸ್ ದೇಸಾಯಿ, ಎಮ್ ಬಿ ಬಿರಾದಾರ, ಪೂಜಾ ನಾಯಿಕ , ಎಚ್ ಆರ್ ಗುಡೋಡಗಿ, ಹಾಗೂ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿರಿದ್ದರು.