ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತೇನೆ: ಕೆ.ವಿವೇಕಾನಂದ
ಸಂಜೆವಾಣಿ ವಾರ್ತೆ
ಮಂಡ್ಯ.ಜೂ.04- ಕಾಂಗ್ರೆಸ್ ಅಭ್ಯರ್ಥಿ ನಾಲ್ಕು ಅವಧಿಯಿಂದಲೂ ಆಯ್ಕೆಯಾಗುತ್ತಿದ್ದಾರೆ. ಒಂದು ಬಾರಿ ನನಗೆ ಅವಕಾಶ ಕಲ್ಪಿಸಿಕೊಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದ್ದು, ಈ ಬಾರಿ ನಾನು ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತೇನೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಕೆ. ವಿವೇಕಾನಂದ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕು ಕಚೇರಿ ಹಾಗೂ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಿರುವ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿ, ಈಗಾಗಲೇ ಕ್ಷೇತ್ರದ 42 ಬೂತ್‍ಗಳಲ್ಲೂ ಮತಯಾಚನೆ ಮಾಡಿದÉನೆ. ಮತದಾರ ಬಂಧುಗಳು ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದು ಹೇಳಿದರು. ನಾಲ್ಕು ಜಿಲ್ಲೆಯ ಎಲ್ಲಾ ತಾಲೂಕು, ಜಿಲ್ಲಾಧ್ಯಕ್ಷರ ಸಭೆ ಕರೆದು ಚರ್ಚೆ ನಡೆಸಿ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಪರಿಹಾರಕ್ಕೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೋ ಅದೆಲ್ಲವನ್ನೂ ಮಾಡುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮೈತ್ರಿ ಆಗಿರುವುದು ನಮಗೆ ವರದಾನವಾಗಿದೆ. ಎನ್.ಡಿ.ಎ. ಅಭ್ಯರ್ಥಿಯಾಗಿರುವ ಕಾರಣ ನಮ್ಮ ಎರಡೂ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಕಾರ್ಯಕರ್ತರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಇದು ನನಗೆ ತುಂಬಾ ಅನುಕೂಲವಾಗಲಿದೆ ಎಂದು ತಿಳಿಸಿದರು.
ಲೋಕಸಭಾ ಚುನಾಣಾ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ,ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.