ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ ಮಕ್ಕಳ ದುಡಿಮೆ ನಿಯಂತ್ರಿಸಲು ಕಾನೂನು ಜಾರಿ:ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ
ಕಲಬುರಗಿ:ಜೂ.01: ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರ ಶ್ರೀನಿವಾಸ ನವಲೆ ಹೇಳಿದರು.
ಶನಿವಾರ ನೂತನವಿದ್ಯಾಲಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ” ” PAN-INDIA Rescue And Rehabilitation Campaign” ” ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016″ ರ ಕುರಿತು ” ಕಾನೂನು ಅರಿವು ಜಾಥಾಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಲ್ಲಾ ಉದ್ಯೋಗಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸ ದುಡಿಸಿಕೊಳ್ಳುವುದು ಕಾನೂನು ಅಪರಾಧವಾಗಿದೆ ಹಾಗೂ 14 ರಿಂದ 18ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.