ಜೂ. 4 ರಂದು ಮತ ಎಣಿಕೆ ಹಿನ್ನೆಲೆಜಿಲ್ಲೆಯಾದ್ಯಂತಹ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಡಿ.ಸಿ. ಆದೇಶ
ಕಲಬುರಗಿ:ಜೂ.01:ಗುಲಬರ್ಗಾ ಲೋಕಸಭಾ (ಪ.ಜಾ.) ಮೀಸಲು ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇದೇ ಜೂನ್ 4 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ನಡೆಯಲಿದೆ. ಮತಎಣಿಕೆ ಕಾರ್ಯವನ್ನು ಸುಗಮವಾಗಿ ನಡೆಸಲು ಹಾಗೂ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲೆಯಾದ್ಯಂತ (ಕಲಬುರಗಿ ನಗರಕ್ಕೆ ನಗರ ಪೊಲೀಸ್ ಆಯುಕ್ತರು ಕಲಂ 144ರಡಿ ಆದೇಶ ಹೊರಡಿಸಿರುವುದರಿಂದ ಕಲಬುರಗಿ ನಗರ ಹೊರತುಪಡಿಸಿ) ಇದೇ ಜೂನ್ 4ರ ಬೆಳಗಿನ 6 ಗಂಟೆಯಿಂದ ಜೂನ್ 5ರ ಬೆಳಗಿನ 6 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ-1973ರ ಕಲಂ 144 ರನ್ವಯ ಕೆಲವೊಂದು ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡಲೇಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊರತುಪಡಿಸಿ) ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.