ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತನ್ನಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮೇ.೩೧: ಬಾಲಕಾರ್ಮಿಕರನ್ನು ಗುರುತಿಸಿ, ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಮಿಕ ನಿರೀಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಜತೆಗೆ ವಸತಿ ಶಾಲೆಗಳಿಗೆ ಪ್ರವೇಶಾತಿ ನೀಡಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಮತ್ತು ಜಿಲ್ಲಾಮಟ್ಟದ ಟಾಸ್ಕ್‍ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಮಿಕ ಅಧಿಕಾರಿಗಳು ತಾಲ್ಲೂಕುವಾರು ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಪಡೆದು, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸೂಚನೆ ನೀಡಿದರು.