ಬಿತ್ತನೆ ಬೀಜದ ದರ ಏರಿಕೆ ಖಂಡಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೨೯; ರಾಜ್ಯದ ಕಾಂಗ್ರೆಸ್ ಸರ್ಕಾರ ಬಿತ್ತನೆ ಬೀಜಗಳ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ದಾವಣಗೆರೆಯ ಎಪಿಎಂಸಿ ಬಳಿಯಿರುವ ಕೃಷಿಕಚೇರಿ ಬಳಿ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಎನ್ ರಾಜಶೇಖರ್,ರೈತಮೋರ್ಚಾ ಮುಖಂಡರಾದ ಲೋಕಿಕೆರೆ ನಾಗರಾಜ್ ಹಾಗೂ ಬಿ.ಎಂ ಸತೀಶ್ ಮಾತನಾಡಿ ಕಳೆದ ಹಂಗಾಮಿನಲ್ಲಿ ಭೀಕರ ಬರದಿಂದ ರೈತರು ಬಸವಳಿದು ತತ್ತರಿಸಿ ಕಂಗಾಲಾಗಿ ಹೋಗಿದ್ದಾರೆ. ಸಾಲ ಸೋಲ ಮಾಡಿ ಬೆಳೆದ ಬೆಳೆಗಳು ಬಿರು ಬಿಸಿಲಿನ ಝಳಕ್ಕೆ ಒಣಗಿ ನಾಶವಾಗಿವೆ. ಕೊಳವೆಬಾವಿಗಳು ನೀರಿಲ್ಲದೆ ಬತ್ತಿ ಹೋಗಿವೆ. ಇಂತಹ ಶೋಚನೀಯ ಸ್ಥಿತಿಯಲ್ಲಿದ್ದ ರೈತ ಮುಂಗಾರು ಹಂಗಾಮಿನಲ್ಲಿ ಮಳೆ ಚೆನ್ನಾಗಿ ಬರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಿಂದ ಮತ್ತು ಬಂದ ವರುಣದಿಂದ ಹರ್ಷಿತನಾಗಿ ಬೀಳು ಬಿದ್ದು ಜಮೀನು ಉಳಿಮೆ ಮಾಡಿ, ಹಸನು ಮಾಡಿಕೊಂಡಿದ್ದಾನೆ.ಆದರೆ ಬಿತ್ತನೆ ಬೀಜಕ್ಕಾಗಿ ಬಂದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬಿತ್ತನೆ ಬೀಜಗಳ ದರವನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದೆ. ಇದರಿಂದ ಮುಕ್ತ ಮಾರುಕಟ್ಟೆಯಲ್ಲಿಯೂ ದರ ಭಾರಿ ಹೆಚ್ಚಳವಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು ಇನ್ನೊಂದು ಕೈಯಲ್ಲಿ ಸುಲಿಗೆ ಮಾಡುತ್ತಿದೆ. ಬೆಲೆ ಏರಿಸುವ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಗೊತ್ತಾಗದಂತೆ ರೈತನ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿದೆ. ಇದು ಕಿಡಿಗೇಡಿತನದ ಪರಮಾವಧಿ ಎಂದು‌ ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಸಹಾಯಧನ ಹೆಚ್ಚಿಸಿ ಬಿತ್ತನೆ ಬೀಜಗಳು ಕಡಿಮೆ ದರದಲ್ಲಿ ವಿತರಣೆ ಮಾಡಿ, ಕಳೆದ ಹಂಗಾಮಿನಲ್ಲಿ ಭೀಕರ ಬರದಿಂದ ಬಸವಳಿದ ರೈತರಿಗೆ ಅನುಕೂಲ ಮಾಡಿಕೊಡಬೇಕು.ರೈತರಿಗೆ ಗುಣಮಟ್ಟದ ಬಿತ್ತನೆ ಬೀಜಗಳ ವಿತರಣೆಗೆ ಕ್ರಮ ವಹಿಸಬೇಕು. ನಕಲಿ ಬೀಜಗಳ ಹಾವಳಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು.
ಜಿಲ್ಲೆಯಲ್ಲಿ ಅಗತ್ಯ ಪ್ರಮಾಣದಷ್ಟು ರಸಗೊಬ್ಬರ ಪೂರೈಕೆ ಮಾಡಲು ಕ್ರಮ ವಹಿಸಬೇಕು.ಬರ ಪರಿಹಾರ ಸರಿಯಾಗಿ ವಿತರಣೆಯಾಗಿಲ್ಲ. ಈ ಬಗ್ಗೆ ಗಮನವಹಿಸಿ ಬರ ಪರಿಹಾರ ಸರಿಯಾದ ರೀತಿಯಲ್ಲಿ ವಿತರಣೆ ಮಾಡಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಸವರಾಜ್ ನಾಯ್ಕ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಾಯ್ಕ್,ಆರ್.ಎಲ್. ಶಿವಕುಮಾರ್, ಡಾ. ನಾಸೀರ್ ಅಹಮದ್, ಶಂಕರ್ ಗೌಡ ಬಿರಾದಾರ, ಪೈಲ್ವಾನ್ ವೀರೇಶ್, ಕೆ.ಜಿ. ಕಲ್ಲಪ್ಪ, ರಮೇಶ್ ನಾಯ್ಕ, ಹೆಚ್.ಬಿ. ನವೀನ ಕುಮಾರ್, ಶಿವಾಜಿರಾವ್, ಪಿ.ಎಸ್. ಬಸವರಾಜ್, ಅಥೀತ್ ಅಂಬರ್ಕರ್, ಆನೆಕೊಂಡದ ಪುಟ್ಟಪ್ಪ, ಧನುಷ್ ಇತರರು ಇದ್ದರು.