ಮೇ 29 ರಂದು ಜಿಲ್ಲೆಯ ನೋಂದಾಯಿತ ಪದವೀಧರಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ
ಕಲಬುರಗಿ:ಮೇ.28:ಕರ್ನಾಟಕ ಈಶಾನ್ಯ ಪದವೀಧರ ಮತಕ್ಷೇತ್ರ ಚುನಾವಣೆ-2024ರ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕಲಬುರಗಿ ಜಿಲ್ಲೆಯ ನೋಂದಾಯಿತ ಪದವೀಧರ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಇದೇ ಮೇ 29 ರಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಜಿಲ್ಲೆಯ ಎಲ್ಲಾ ಪದವೀಧರ ಮತದಾರರು ಮೇಲ್ಕಂಡ ದಿನದಂದು ನಡೆಯುವ ಈ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಮನವಿ ಮಾಡಿದ್ದಾರೆ.
ಈ ಹಿಂದಿನ ಚುನಾವಣೆಯಲ್ಲಿ ಬಹಳಷ್ಟು ಪ್ರಮಾಣದಲ್ಲಿ ಮತಗಳು ತಿರಸ್ಕøತಗೊಂಡಿರುವುದು ಕಂಡು ಬಂದಿದ್ದು, ಜಿಲ್ಲೆಯ ಎಲ್ಲಾ ಪದವೀಧರ ಮತದಾರರಿಗೆ ಮತದಾನದ ಕುರಿತು ಅರಿವು ಮೂಡಿಸುವುದು ಅಗತ್ಯವೆಂದು ತಿಳಿದು ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.