ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮವಹಿಸಲು ಸೂಚನೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮೇ.೨೩; ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತಾ ಕಾರ್ಯಾಗಾರ ಹಾಗೂ ಕೃಷಿ ಪರಿಕರಗಳ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಚಿತ್ರದುರ್ಗ ಕೃಷಿಯಾಧಾರಿತ ಜಿಲ್ಲೆಯಾಗಿದ್ದು, ಈ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಹೆಕ್ಟೇರ್‍ನಲ್ಲಿ  ಮುಂಗಾರು ಹಂಗಾಮಿಗೆ ಬಿತ್ತನೆ ಗುರಿ ಹೊಂದಲಾಗಿದೆ. ಹಾಗಾಗಿ ಮುಖ್ಯವಾಗಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆ, ಕೃಷಿ ಚಟುವಟಿಕೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಕೆ, ಹೊಸ ತಳಿ ಹಾಗೂ ಹೆಚ್ಚಿನ ಇಳುವರಿಯ ಬಿತ್ತನೆ ಬೀಜಗಳ ಪರಿಚಯವನ್ನು ನಿಗಧಿತ ಸಮಯದಲ್ಲಿ, ನಿರ್ಧಿಷ್ಟ ಅವಧಿಯಲ್ಲಿ ರೈತರಿಗೆ ಅಗತ್ಯ ಮಾಹಿತಿ ತಲುಪಿಸುವ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಸಮರ್ಪಕವಾಗಿ ಬಿತ್ತನೆ ಬೀಜ, ರಸಗೊಬ್ಬರಗಳು ನಿಗಧಿತ ಸಮಯಕ್ಕೆ ದೊರೆಯುವಂತಾಗಬೇಕು ಎಂದರು.