ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ವಿಧಿವಶ
ಕಲಬುರಗಿ,ಮೇ.22-ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (80) ಅವರು ಮಂಗಳವಾರ ತಡರಾತ್ರಿ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯರಾತ್ರಿ 01 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ.ಜಹೇರಾ ಸರಡಗಿ ಮತ್ತು ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ನಗರದ ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆಗೆ ದರ್ಗಾ ರಸ್ತೆಯ ಮಕ್ಬರಾ ಮಜೀದ್ ಖಮರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಕಲಬುರಗಿಯಲ್ಲಿ 1944 ಜೂನ್ 5ರಂದು ಜನಿಸಿದ ಇಕ್ಬಾಲ್ ಅಹ್ಮದ್ ಸರಡಗಿ ಅವರು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿ.ಎ.ಎಲ್‍ಎಲ್‍ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ದಿ.ಎನ್.ಧರ್ಮಸಿಂಗ್ ಪರಮಾಪ್ತರಾಗಿದ್ದ ಸರಡಗಿ 1999 ಮತ್ತು 2004ರಲ್ಲಿ 2 ಬಾರಿ ಸಂಸದ, 1 ಬಾರಿ ಎಂಎಲ್‍ಸಿ ಆಗಿ ಸೇವೆ ಸಲ್ಲಿಸಿದ್ದರು. 2009 ರಲ್ಲಿ ಕಲಬುರಗಿ ಮೀಸಲು ಕ್ಷೇತ್ರವಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದರು.
ಸರಡಗಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಚಿವ ಈಶ್ವರ ಖಂಡ್ರೆ, ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಶಾಸಕರಾದ ಎಂ.ವೈ.ಪಾಟೀಲ, ಬಿ.ಆರ್.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ, ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ದೊಡ್ಡಮನಿ ಸೇರಿದಂತೆ ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.