ಬಸ್‍ಗಳಿಲ್ಲದೆ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.18- ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಗಾಗಿ ಮೈಸೂರಿನಿಂದ ಚಾಮರಾಜನಗರಕ್ಕೆ ಹಾಗೂ ಚಾಮರಾಜನಗರದಿಂದ ಮೈಸೂರಿಗೆ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಹೆಚ್ಚುವರಿ ಬಸ್‍ಸೇವೆ ಒದಗಿಸಬೇಕೆಂದು ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕೆಎಸ್‍ಆರ್‍ಟಿಸಿ ಸೂಪರಿಡೆಂಟೆಂಟ್ ವಿನಾಯಕ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ನಂತರ ಮಾತನಾಡಿದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಕರ್ನಾಟಕ ಸರ್ಕಾರದ ವತಿಯಿಂದ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಸೇವೆ ನೀಡಿರುವುದು ಸ್ವಾಗತಾರ್ಹ ವಿಷಯ. ಇದರ ಜೊತೆಗೆ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಬಸ್‍ಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯನ್ನು ಅನುಭವಿಸುವಂತಾಗಿದೆ ಎಂದರು.
ಬೆಳಿಗಿನ ಸಮಯದಲ್ಲಿ ಸಮರ್ಪಕ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಸಕಾಲದಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ಪರದಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅನಾನುಕೂಲವಾಗುತ್ತಿದೆ.
ಬಹಳ ದಿನಗಳಿಂದಲೂ ಸಹ ಈ ಸಮಸ್ಯೆಯಿದ್ದು, ಮೈಸೂರಿನಿಂದ ಚಾಮರಾಜನಗರಕ್ಕೆ ಹಾಗೂ ಚಾಮರಾಜನಗರದಿಂದ ಮೈಸೂರಿಗೆ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಹೆಚ್ಚುವರಿ ಬಸ್‍ಸೇವೆ ನೀಡುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚಾ.ರಂ.ಕುಮಾರ್, ಆಟೋ ನಾಗೇಶ್, ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ನಂಜುಂಡಶೆಟ್ಟಿ, ಸಾಗರ್ ರಾವತ್, ಬದನಗುಪ್ಪೆ ಮಹೇಶ್, ಸುರೇಶ್, ಮೂಡ್ಲುಪುರ ಪ್ರಕಾಶ್ ಮತ್ತಿತರರಿದ್ದರು.