ಮೂವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ
ಬೀದರ್:ಮೇ.17: ಜಿಲ್ಲಾ ವಕೀಲರ ಸಂಘದಿಂದ ವರ್ಗಾವಣೆಯಾದ ವಿವಿಧ ನ್ಯಾಯಾಲಯಗಳ ಮೂವರು ನ್ಯಾಯಾಧೀಶರನ್ನು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇರುವ ಸಂಘದ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿ ಬೀಳ್ಕೊಡಲಾಯಿತು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಗಂಗಾಧರ ಹಡಪದ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅಬ್ದುಲ್ ಖಾದರ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಕೆ. ಕನಕಟ್ಟೆ ಅವರನ್ನು ಸಂಘದ ಪದಾಧಿಕಾರಿಗಳು ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸತ್ಕರಿಸಿದರು.
ಮೂವರೂ ನ್ಯಾಯಾಧೀಶರು ಉತ್ತಮ ಕಾರ್ಯ ನಿರ್ವಹಣೆಯಿಂದ ಜಿಲ್ಲೆಯಲ್ಲಿ ಹೆಸರು ಮಾಡಿದ್ದರು. ವಕೀಲರ ಸಂಘದ ಚಟುವಟಿಕೆಗಳಿಗೆ ಸದಾ ಸಹಕಾರ ನೀಡಿದ್ದರು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ(ಪುಟ್ಟು) ಪಾಟೀಲ ನುಡಿದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್, ಪ್ರಧಾನ ಸಿವಿಲ್ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಗುಂಡು ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ಜಂಟಿ ಕಾರ್ಯದರ್ಶಿ ಶಿಲ್ಪಾ ಪಾಟೀಲ, ಖಜಾಂಚಿ ಪ್ಯಾರೂಸಾಬ್ ಮತ್ತಿತರರು ಇದ್ದರು.