ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಎಬಿವಿಪಿ ಪ್ರತಿಭಟನೆ
ಸಂಜೆವಾಣಿ ವಾರ್ತೆ,
ವಿಜಯಪುರ,ಮೇ.14:ರಾಷ್ಟ್ರೀಯ ಶಿಕ್ಷಣ ನೀತಿ- 2020ನ್ನು ಹಿಂಪಡೆದುಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಎಬಿವಿಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಈ ಸಂಬಂಧ ಮಧ್ಯಸ್ಥಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ಮಾತನಾಡಿ, ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿ ಜಾರಿಗೆ ಬರಬೇಕು. ಅದು ಮುಂದಿನ ಹತ್ತಾರು ವರ್ಷಗಳ ನಂತರ ದೇಶದಲ್ಲಿ ಕೌಶಲ್ಯಯುತ ಯುವಶಕ್ತಿ ಹೊರಗಡೆ ಬರಲು ಸಹಾಯಕಾರಿಯಾಗಬೇಕು. ಬ್ರಿಟಿಷ್ ಶಿಕ್ಷಣ ನೀತಿಯಿಂದ ಮುಕ್ತರಾಗಿ ಭಾರತೀಯ ಶಿಕ್ಷಣವನ್ನು ಪಡೆಯಬೇಕು ಎಂಬ ಉದ್ದೇಶದಿಂದ ‘ರಾಷ್ಟ್ರೀಯಶಿಕ್ಷಣ ನೀತಿ-2020’ಅನ್ನು ಭಾರತ ಸರ್ಕಾರ ಜಾರಿಗೆ ತಂದಿದ್ದು ಅದನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ರಾಜ್ಯ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು, ಆದರೆ ಇಂದಿನ ರಾಜ್ಯ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯುತ್ತೇವೆ ಎಂದು ಹೇಳಿದ ಕಾರಣಕ್ಕೋಸ್ಕರ ಒಂದು ಶಿಕ್ಷಣ ನೀತಿಯನ್ನು ಬದಲಾವಣೆ ಮಾಡಲು ಹೊರಟಿರುವ ಸರ್ಕಾರದ ನಡೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು. ಕಾಶ್ಮೀರದಿಂದ ಕನ್ಯಾ ಕುಮಾರಿವರೆಗೆ ಒಂದೇ ರೀತಿಯ ಶಿಕ್ಷಣ ಪದ್ಧತಿ ಇರಬೇಕು. ಆ ಶಿಕ್ಷಣ ಪದ್ಧತಿ, ಭಾರತೀಯ ವಿದ್ಯಾರ್ಥಿಗಳಿಗೆ ಯೋಗ ಹಾಗೂ ಇನ್ನಿತರ ಕೌಶಲ್ಯವನ್ನು ನೀಡುವ ಉದ್ದೇಶ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದೆ. ಮುಂದಿನ 20-25 ವರ್ಷಗಳಲ್ಲಿ ಆಗಬಹುದಾದ ಬದಲಾವಣೆಯನ್ನು ಮುಂದಿಟ್ಟುಕೊಂಡು ಈ ನೀತಿಯನ್ನು ಹಲವಾರು ಶಿಕ್ಷಣ ತಜ್ಞರು ತಯಾರಿ ಮಾಡಿದ್ದಾರೆ, ಆದರೆ ರಾಜ್ಯ ಸರ್ಕಾರ ರಾಷ್ಟ್ರೀಯತೆಯನ್ನು ತುಂಡು ಮಾಡಿ ಪ್ರತ್ಯೇಕತೆಯ ಹೆಜ್ಜೆಯನ್ನು ಇಡುತ್ತಿರುವುದು ಕರ್ನಾಟಕವನ್ನು ಹಿಮ್ಮುಖ ಚಲನೆಗೆ ತೆಗೆದುಕೊಂಡು ಹೋದಂತಾಗುತ್ತದೆ. ಭಾರತೀಯತೆಯ ವಿರೋಧಿ ನೀತಿಯನ್ನು, ಭಾರತೀಯ ಜೀವನ ಪದ್ಧತಿಯನ್ನು ವಿರೋಧಿಸುವ ನೀತಿಯನ್ನು, ಇಂಗ್ಲಿಷ್ ಶಿಕ್ಷಣ ಪದ್ಧತಿಯ ನಿಲುವನ್ನು ಒಪ್ಪಿಕೊಳ್ಳುವ ನೀತಿಯನ್ನು, ಲಿಬರಲ್‍ಎಜುಕೇಶನ್‍ನಿಂದ ಹಿನ್ನಡೆಗೆತೆಗೆದುಕೊಂಡು ಹೋಗುವ ನೀತಿಯನ್ನು, ಯುಜಿಸಿ ನಿಯಮಾವಳಿಗಳನ್ನು ಕಡೆಗಣಿಸುವ ನೀತಿಯನ್ನ, ಈ ರಾಜ್ಯ ಸರ್ಕಾರ ತೆಗೆದುಕೊಳ್ಳುವುದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತಿದೆ. ಯು.ಪಿ.ಎಸ್.ಸಿ ಹಾಗೂ ಇನ್ನಿತರ ಸ್ಪರ್ಧಾತ್ಮಕ ಕೋರ್ಸ್‍ಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯದ ಶಿಕ್ಷಣ ಪದ್ಧತಿಯನ್ನು ಬದಲಾವಣೆ ಮಾಡುವುದರಿಂz Àಅನ್ಯಾಯ ಮಾಡಿದಂತಾಗುತ್ತದೆ ಎಂದವರು ಹೇಳಿದ್ದಾರೆ.
ಎಬಿವಿಪಿಯ ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ ರವರು ಮಾತನಾಡಿ, ಕೇವಲ ರಾಜಕೀಯ ಕಾರಣಕ್ಕೋಸ್ಕರ ಒಂದು ಉತ್ತಮ ಪ್ರಯೋಗ ಶೀಲ ಶಿಕ್ಷಣ ಪದ್ಧತಿಯನ್ನು ಬದಲಾವಣೆ ಮಾಡಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡಲು ಹೊರಟಿರುವ ಸರ್ಕಾರದ ನಡೆ ನಿಜಕ್ಕೂ ಮುಂದಿನ ದಿನಗಳಲ್ಲಿ ಬಹು ದೊಡ್ಡ ಮಾರಕವಾಗಲಿದೆ, ಎನ್‍ಇಪಿ ಜಾರಿ ಮಾಡಿದ ಕಾರಣಕ್ಕೋಸ್ಕರ ನೂರಾರು ಕೋಟಿ ರೂಪಾಯಿ ಅನುದಾನವನ್ನು ಪಿಎಂ ಉಷಾ ಯೋಜನೆಯಡಿಯಲ್ಲಿ ರಾಜ್ಯದ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ ನೀಡಿದೆ, ಒಂದು ವೇಳೆ ಎನ್.ಇ.ಪಿಯನ್ನು ರದ್ದು ಪಡಿಸಿದ್ದೆ ಆದಲ್ಲಿ ವಿಶ್ವವಿದ್ಯಾಲಯ ನೀಡಿದ ಅನುದಾನವನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದುಕೊಳ್ಳಬೇಕಾಗುತ್ತದೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು ಈ ಎಲ್ಲ ವಿಷಯವನ್ನು ಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಧ್ಯಂತರ ವರದಿಯ ಪ್ರಕಾರ ಹಿಂದಿನ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರುತ್ತೇವೆ ಎಂಬ ಆದೇಶವನ್ನು ನೀಡಿರುವುದು ಎಬಿವಿಪಿ ಖಂಡಿಸುತ್ತದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದು ಎನ್.ಇ.ಪಿಯಲ್ಲಿ ಆಗಿರುವ ಲೋಪದೋಷಗಳನ್ನ ಸರಿಪಡಿಸಿ ರಾಜ್ಯದಲ್ಲಿ ಸಮರ್ಪಕವಾದ ಎನ್.ಇ.ಪಿ ಮಾಡಿ ಈ ದೇಶದ ಶಿಕ್ಷಣ ಪದ್ಧತಿಯೊಂದಿಗೆ ಕರ್ನಾಟಕ ರಾಜ್ಯವನ್ನಾಗಿ ತೆಗೆದುಕೊಂಡು ಹೋಗುವ ಮಹತ್ತರ ಜವಾಬ್ದಾರಿಯನ್ನು ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಒಂದು ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಪಡಿಸಿದ್ದೆ ಆದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದÀರ್ಭದಲ್ಲಿ ನಗರ ಸಂಘಟನಾ ಕಾರ್ಯದರ್ಶಿ ಹರ್ಷಾ ನಾಯಕ, ಸಾಯಿನಾಥ, ಗುರುಪ್ರಸಾದ, ಕೃಷ್ಣಾ, ಮುತ್ತು ತಳವಾರ, ವಿಶಾಲ ಕಾಂಬಳೆ, ಆದಿತ್ಯ, ಸುಕನ್ಯಾ ಇತರರು ಉಪಸ್ಥಿತರಿದ್ದರು.