ಈಶಾನ್ಯ ಪದವಿಧರ ಕ್ಷೇತ್ರದ ಚುನಾವಣೆ ಘೋಷಣೆ:ಜೂ. 3ಕ್ಕೆ ಮತದಾನ, ಜೂ. 6ಕ್ಕೆ ಮತ ಎಣಿಕೆ:ಬಿ.ಫೌಜಿಯಾ ತರನ್ನುಮ್
ಕಲಬುರಗಿ,ಮೇ.4: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನೂತನ ಸದಸ್ಯರ ಆಯ್ಕೆಗೆ ಚುನಾವಣೆ ಘೋಷಿಸಿದು, ಜಿಲ್ಲೆಯಾದ್ಯಂತ ತಕ್ಷಣದಿಂದಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಮತ್ತು ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮೇ 9 ರಂದು ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 16ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಮೇ 17ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಮೇ 20 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಜೂನ್ 6ಕ್ಕೆ ಮತ ಎಣಿಕೆ ಕಾರ್ಯ ನಡೆದು ಒಟ್ಟಾರೆಯಾಗಿ ಜೂನ್ 12 ರೊಳಗೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿಯಲಿದೆ ಎಂದರು.
ಪ್ರಸ್ತುತ ಈಶಾನ್ಯ ಪದವೀಧರ ಕ್ಷೇತ್ರದ ಸದಸ್ಯರಾಗಿರುವ ಚಂದ್ರಶೇಖರ ಪಾಟೀಲ ಅವರ ಅವಧಿಯು ಜೂನ್ 21ಕ್ಕೆ ಮುಗಿಯಲಿರುವ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಯಾಗಿದೆ.
ಮತದಾರರ ಪಟ್ಟಿ ಸೇರ್ಪಡೆಗೆ ಮೇ 6ರ ವರೆಗೆ ಅವಕಾಶ: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ನಮೂನೆ-18ರಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮೇ 6ರ ವರೆಗೆ ಸಾಯಂಕಾಲ 5.30 ಗಂಟೆ ವರೆಗೆ ಅವಕಾಶವಿದ್ದು, 01-11-2020 ಕ್ಕಿಂತ ಮೊದಲು ಪದವಿ ತೇರ್ಗಡೆಯಾದವರು ಪದವಿ ಅಂಕಪಟ್ಟಿ ಹಾಗೂ ಸ್ಥಳೀಯ ವಾಸಸ್ಥಳದ ಪುರಾವೆ ದಾಖಲೆಗಳನ್ನು ಸಂಬಂಧಿಸಿದ ತಹಶೀಲ್ದಾರ ಕಚೇರಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಿ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದೆಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.