ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆ:ಜೂ. 3ಕ್ಕೆ ಮತದಾನ, ಜೂ. 6ಕ್ಕೆ ಮತ ಎಣಿಕೆ:ಬಿ.ಫೌಜಿಯಾ ತರನ್ನುಮ್
ಕಲಬುರಗಿ:ಮೇ.3: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನೂತನ ಸದಸ್ಯರ ಆಯ್ಕೆಗೆ ಚುನಾವಣೆ ಘೋಷಿಸಿದ್ದು, ಜಿಲ್ಲೆಯಾದ್ಯಂತ ತಕ್ಷಣದಿಂದಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಮತ್ತು ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮೇ 9 ರಂದು ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 16ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಮೇ 17ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಮೇ 20 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಜೂನ್ 6ಕ್ಕೆ ಮತ ಎಣಿಕೆ ಕಾರ್ಯ ನಡೆದು ಒಟ್ಟಾರೆಯಾಗಿ ಜೂನ್ 12 ರೊಳಗೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿಯಲಿದೆ ಎಂದರು.
ಪ್ರಸ್ತುತ ಈಶಾನ್ಯ ಪದವೀಧರ ಕ್ಷೇತ್ರದ ಸದಸ್ಯರಾಗಿರುವ ಚಂದ್ರಶೇಖರ ಪಾಟೀಲ ಅವರ ಅವಧಿಯು ಜೂನ್ 21ಕ್ಕೆ ಮುಗಿಯಲಿರುವ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಯಾಗಿದೆ.