ಬಂಜಾರ ಸಮಾಜದ ಮುಖಂಡ ವಿಠ್ಠಲ ಜಾಧವ್ ಕಾಂಗ್ರೆಸ್ ಸೇರ್ಪಡೆ
ಕಲಬುರಗಿ,ಮೇ.3-ಬಂಜಾರ ಸಮಾಜದ ಮುಖಂಡ ಹಾಗೂ ಮಹಾನಗರ ಪಾಲಿಕೆ ಮಾಜಿ ಸದಸ್ಯ ವಿಠ್ಠಲ ಜಾಧವ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಮಾಜಿ ಸಭಾಪತಿ ವಿ.ಆರ್.ಸುದರ್ಶನ, ಸಚಿವ ಡಾ.ಶರಣಪ್ರಕಾಶ ಪಾಟೀಲ, ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯಸಿಂಗ್, ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಅವರ ಸಮ್ಮುಖದಲ್ಲಿ ವಿಠ್ಠಲ ಜಾಧವ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಶಾಲು ಹೊದಿಸುವುದರ ಮೂಲಕ ವಿಠ್ಠಲ ಜಾಧವ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ, ಮಾತನಾಡಿದ ಜಾಧವ್ ಅವರು, ಬಿಜೆಪಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವುದಿಲ್ಲ. ಬದಲಿಗೆ ಭಾವನಾತ್ಮಕ ಅಂಶಗಳಿಗೆ ಮಾತ್ರ ಒತ್ತು ನೀಡಲಾಗುತ್ತದೆ. ಹೀಗಾಗಿ, ಹಿರಿಯ ಮುತ್ಸದ್ಧಿ ಮಲ್ಲಿಕಾರ್ಜುನ ಖರ್ಗೆಯವರ ಅಭಿವೃದ್ಧಿಪರ ಧೋರಣೆಗೆ ಗೌರವ ಕೊಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದಾಗಿ ಹೇಳಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಜಾಧವ್ ಅವರ ಬೆಂಬಲಿಗರು ಉಪಸ್ಥಿತರಿದ್ದರು.