ಕಲಬುರಗಿ ಸಮಗ್ರ ಅಭಿವೃದ್ಧಿಗೆ ಒತ್ತು:ರಾಧಾಕೃಷ್ಣ ದೊಡ್ಡಮನಿ
ಕಲಬುರಗಿ,ಮೇ 3: ಗುಲ್ಬರ್ಗ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಪ್ರಧಾನವಾಗಿ ಗಮನದಲ್ಲಿಟ್ಟುಕೊಂಡು ನೀಲನಕ್ಷೆ ಸಿದ್ದಪಡಿಸಲಾಗಿದ್ದು, ಅದರನ್ವಯ ಮುಂದಿನ ಐದು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ತಿಳಿಸಿದರು.
ಇಲ್ಲಿನ ಸ್ಟೇಷನ್ ಬಜಾರ್ ಸಮೀಪದ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಗೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರೊಂದಿಗೆ ‘ನವ ಕಲಬುರಗಿಯ ಹೊಸ ಸಂಕಲ್ಪ-ಕಲಬುರಗಿ ನೆಕ್ಸ್ಟ್’ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮಾನವ ಸಂಪನ್ಮೂಲ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ, ಪಶು ಸಂಗೋಪನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಸ್ತ್ರೀ ಸಮೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಪ್ರಣಾಳಿಕೆ ಮೂಲಕ ಭರವಸೆ ನೀಡಲಾಗುತ್ತಿದೆ ಎಂದರು.
ಮಾನವ ಬಂಡವಾಳ ಹೂಡಿಕೆ ಎಂಬುದು ಒಂದು ಸಮಾಜದ ಸಮಗ್ರ ಅಭಿವೃದ್ಧಿಯನ್ನು ನಿರ್ಧರಿಸುತ್ತದೆ. ಹಾಗಾಗಿ, ಮುಂಬರುವ ಐದು ವರ್ಷಗಳಲ್ಲಿ ‘ಸಣ್ಣ ಹೆಜ್ಜೆಗಳು- ಸಾರ್ಥಕ ಸಾಧನೆಗಳು’ ಶೀರ್ಷಿಕೆಯಡಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗುವುದು. ಆ ಮೂಲಕ ಉದ್ಯೋಗ ಸೃಷ್ಟಿ, ಶಿಕ್ಷಣಕ್ಕೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಆಯಾ ಕ್ಷೇತ್ರದ ತಜ್ಞರೊಂದಿಗೆ ಕೂಲಂಕಷವಾಗಿ ಚರ್ಚಿಸಿ ಪ್ರಣಾಳಿಕೆ ಸಿದ್ದಪಡಿಸಲಾಗಿದೆ ಎಂದು ವಿವರಿಸಿದರು.
ಇದೇವೇಳೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಮುಂದಿನ ಐದು ವರ್ಷಗಳಲ್ಲಿ ಮಾಡಬಹುದಾದ ಕೆಲಸಗಳನ್ನು ಮಾತ್ರ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಪ್ರಣಾಳಿಕೆ ಅನ್ವಯ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಕಾರಾತ್ಮಕ ವಾತಾವರಣ ಇದೆ. ಹೀಗಾಗಿ, ನೀಡಿದ ಭರವಸೆಯಂತೆ ಎಲ್ಲವನ್ನೂ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಾಗ್ದಾನ ಮಾಡಿದರು.
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಕಂಡುಬರುತ್ತಿದೆ. ಜನರು ಹುರುಪಿನೊಂದಿಗೆ ಪಕ್ಷದ ಪರವಾಗಿ ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮೇಲಾಗಿ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಗೆಲುವಿನ ಕಡೆಗೆ ಕೊಂಡೊಯ್ಯುತ್ತವೆ ಎಂಬ ವಿಶ್ವಾಸವಿದೆ ಎಂದು ನುಡಿದರು.
ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯ್‍ಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮಾಜಿ ಸಚಿವ ರೇವುನಾಯಕ ಬೆಳಮಗಿ, ವಿಶ್ವನಾಥ ಪಾಟೀಲ್ ಹೆಬ್ಬಾಳ, ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್, ಡಾ.ಕಿರಣ ದೇಶಮುಖ, ರಾಜಗೋಪಾಲರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯ ಪ್ರಣಾಳಿಕೆ
ಪ್ರಸಕ್ತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೀಗಾಗಿ, ಮುಂದಿನ ಐದು ವರ್ಷಗಳಲ್ಲಿ ಕ್ಷೇತ್ರದಾದ್ಯಂತ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿ ಸ್ಥಳೀಯ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.
ಒಟ್ಟಾರೆ ಅಭಿವೃದ್ಧಿ, ಸುಧಾರಣೆ ಮತ್ತು ಸಬಲೀಕರಣದ ತತ್ವಕ್ಕೆ ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗಿದೆ. ಬಹುಮುಖ್ಯವಾಗಿ ಕ್ಷೇತ್ರದಲ್ಲಿ ಬೆಳೆಯುವ ತೊಗರಿ ಮತ್ತು ಕಮಲಾಪುರ ಬಾಳೆಹಣ್ಣಿಗೆ ಈಗಾಗಲೇ ಜಾಗತಿಕ ಸ್ಥಾನಮಾನ ದೊರೆತಿದೆ. ಈ ನಿಟ್ಟಿನಲ್ಲಿ ಮಾರುಕಟ್ಟೆ ಅಭಿವೃದ್ಧಿಪಡಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ರೈತರ ಕೃಷಿ ಚಟುವಟಿಕೆಗಳನ್ನು ಆಧುನೀಕರಣಗೊಳಿಸುವ ಮೂಲಕ ಇಳುವರಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ, ಕೃಷಿ, ಪಶು ಸಂಗೋಪನೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಸ್ತ್ರೀ ಸಮೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿಯ ಅಂಶಗಳನ್ನು ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದರು.
ಎಂಎಸ್‍ಎಂಇಗೆ ಅಗತ್ಯ ವಾತಾವರಣ ರೂಪಿಸುವುದು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಿಂದ ನಡೆಯುತ್ತಿರುವ ಹಾಸ್ಟೆಲ್‍ಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸುವುದು, ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸಂವಹನ ಸಾಮಥ್ರ್ಯ ಹೆಚ್ಚು ಮಾಡಲು ಅಗತ್ಯ ವಾತಾವರಣ ರೂಪಿಸುವುದು, ನವೋದ್ಯಮಗಳಿಗೆ ಪ್ರೋತ್ಸಾಹ ನೀಡುವುದು, ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು, ಮಹಿಳೆಯರಿಗಾಗಿ ಪ್ರತ್ಯೇಕ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗುವುದು ವಿವರಿಸಿದರು.