ಪಿಯು ಕಾಲೇಜು ಪ್ರಾಂಶುಪಾಲರ ಸಂಘದಿಂದ ಪ್ರತಿಭಾ ಪುರಸ್ಕಾರ
ಕೋಲಾರ.ಸೆ.೨೨-ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜೀವನದ ಮಹತ್ತರ ಘಟ್ಟವಾಗಿದೆ, ಇದು ನಿಮ್ಮ ಮುಂದಿನ ಭವಿಷ್ಯದ ದಾರಿಯನ್ನು ನಿರ್ಧರಿಸುತ್ತದೆ ಎಂಬುದನ್ನು ಅರಿತು ಉಪನ್ಯಾಸಕರು ವಿಶೇಷ ತರಗತಿಗಳನ್ನು ತೆಗೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳ ಮತ್ತು ಪೋಷಕರ ಕನಸು ನನಸಾಗುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಕರೆ ನೀಡಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೋಲಾರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದಿಂದ ಏರ್ಪಡಿಸಲಾಗಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲೆಯಲ್ಲಿ ಹೆಚ್ಚಿನ ಫಲಿತಾಂಶ ಪಡೆದಿರುವ ಕಾಲೇಜುಗಳ ಪ್ರಶಂಸೆ ಮತ್ತು ಪದವಿಪೂರ್ವ ಕಾಲೇಜುಗಳ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದವರೇ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಮಹತ್ತರ ಪಾತ್ರ ವಹಿಸಬೇಕೆಂದು ತಿಳಿಸಿದರು. ಪಿಯು ಶಿಕ್ಷಣದ ಗುಣಮಟ್ಟ ವೃದ್ದಿಗೆ ಪ್ರಾಂಶುಪಾಲರ ಸಂಘ ಕೈಜೋಡಿಸಬೇಕು ಎಂದರು.
ಕೋಲಾರ ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಲು ಉಪನ್ಯಾಸಕರು, ಪ್ರಾಂಶುಪಾಲರ ಸಹಕಾರ ಅಗತ್ಯವಿದೆ, ಈ ಸಂಬಂಧ ವಿಶೇಷ ತರಗತಿ ನಡೆಸಿ ವಿದ್ಯಾರ್ಥಿಗಳನ್ನು ಸಾಧನೆಗೆ ಪ್ರೇರೇಪಿಸಿ, ಜಿಲ್ಲೆಯ ಘನತೆ ಹೆಚ್ಚಿಸಿ ಎಂದು ಕಿವಿ ಮಾತು ಹೇಳಿದರು.
ಜಿಲ್ಲಾಡಳಿತದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ನೀಟ್, ಸಿಇಟಿ ಮತ್ತು ಜೆಇಇಗೆ ಉಪಯೋಗವಾಗುವ ಪುಸ್ತಕಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ ಡಿಸಿಯವರು, ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಸಿಇಟಿ/ನೀಟ್ ಸಂಪನ್ಮೂಲ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಂ.ಬಾಲಕೃಷ್ಣ ಮಾತನಾಡಿ, ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರದಂತಹ ಕಾರ್ಯಗಳನ್ನು ನಡೆಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸಹಕರಿಸಿದ ಜಿಲ್ಲೆಯ ಎಲ್ಲಾ ಪ್ರಾಂಶುಪಾಲರ ಕಾರ್ಯವನ್ನು ಸ್ಮರಿಸಿಕೊಂಡರು.
ವಿದ್ಯಾರ್ಥಿಗಳು ಕಾಲೇಜಿಗೆ ಗೈರಾಗಬಾರದು, ಅಂದಿನ ಪಠ್ಯವನ್ನು ಅಂದೇ ಓದಿ ಮುಗಿಸಬೇಕು, ನಿಮ್ಮ ಕಲಿಕೆಯಲ್ಲಿ ಎದುರಾಗುವ ಸಮಸ್ಯೆಗಳ ನಿವಾರಣೆಗೆ ಧೈರ್ಯದಿಂದ ಉಪನ್ಯಾಸಕರನ್ನು ಪ್ರಶ್ನಿಸಿ ಗೊಂದಲ ನಿವಾರಿಸಿಕೊಳ್ಳಬೇಕು ಎಂದು ಕೋರಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿಗಳು ಪುರಸ್ಕರಿಸಿದರು.
ಸಮಾರಂಭದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಮುರಳಿ ಹಾಗೂ ಜಿಲ್ಲೆಯ ವಿವಿಧ ಪಿಯು ಕಾಲೇಜುಗಳ ಪ್ರಾಂಶುಪಾಲರು ಹಾಜರಿದ್ದರು.