ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಬಿ.ಎಲ್.ದೇವರಾಜು
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಏ.30: ಇತ್ತೀಚೆಗೆ ಮುಕ್ತಾಯಗೊಂಡ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸಿ ಶಾಂತಿಯುತವಾಗಿ ಮತದಾನ ಮಾಡಿದ ತಾಲೂಕಿನ ಎಲ್ಲಾ ಮತದಾರರಿಗೂ ಕಾಂಗ್ರೆಸ್ ಮುಖಂಡ ಬಿ.ಎಲ್.ದೇವರಾಜು ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.
ಕ್ಷೇತ್ರದಲ್ಲಿ ಶೇ.80 ಕ್ಕೂ ಅಧಿಕ ಮತದಾನವಾಗಿದ್ದು ಪುರುಷರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತ ಚಲಾಯಿಸಿದ್ದಾರೆ. ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮತದಾರರ ಜೊತೆಗೆ ಮಹಿಳೆಯರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳಾ ಮತದಾರರ ಮನ ಗೆದ್ದಿದ್ದು ನಮ್ಮ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ ಎಂದಿರುವ ಬಿ.ಎಲ್.ದೇವರಾಜು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಿದ್ದಾರೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೆ. ಆ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದೇ ರೀತಿ ಮೈಚಳಿ ಬಿಟ್ಟು ಕೆಲಸ ಮಾಡಿದ್ದರೆ ನಾನು ಸೋಲುವ ಪ್ರಶ್ನೆಯೇ ಬರುತ್ತಿರಲಿಲ್ಲ. ಪ್ರಸಕ್ತ ಲೋಕಸಭಾ ಚುನಾವಣೆ ಕೆ.ಆರ್.ಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಹೆಚ್ಚಿಸಿದ್ದು ಕೆ.ಆರ್.ಪೇಟೆ ವಿಧಾನ ಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅಧಿಕ ಬಹುಮತ ಗಳಿಸಲಿದ್ದಾರೆ. ಪಕ್ಷದ ಪರ ಒಗ್ಗಟ್ಟಿನಿಂದ ಕೆಲಸ ಮಾಡಿದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರಿಗೂ ನನ್ನ ಅಭಿನಂದನೆಗಳು ಎಂದು ಬಿ.ಎಲ್.ದೇವರಾಜು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.