ಕೇಂದ್ರದ ಮಾಜಿ ಸಚಿವ ವಿ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಡಾ ಅಂಬಾರಾಯ ಅಷ್ಠಗಿ ಶೋಕ
ಕಲಬುರಗಿ:ಏ. 29:ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಸದಸ್ಯರಾದ ಹಿರಿಯ ಮುತ್ಸದ್ದಿ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ. ಅಂಬಾರಾಯ ಅಷ್ಠಗಿ ಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆಯಿಂದ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ ಎಂದು ಹೇಳಿದ್ದಾರೆ.
“ಬುದ್ಧನೆಡೆಗೆ ನಮ್ಮ ನಡಿಗೆ” ಕಾರ್ಯಕ್ರಮದಲ್ಲಿ ಅವರೊಂದಿಗೆ ಮೈಸೂರಿನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅವರು ಬುದ್ಧ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ರವರ ತತ್ವಗಳನ್ನು ಅಳವಡಿಸಿಕೊಂಡ ಒಬ್ಬ ಮುತ್ಸದ್ದಿ ನಾಯಕರಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು.ಅವರೊಂದಿಗಿನ ನನ್ನ ಒಡನಾಟ ಸ್ಮರಣಿಯವಾಗಿರಲಿದೆ.
ದಲಿತ ದಮನಿತರ ಪರವಾದ ದಿಟ್ಟ ದನಿ ಮತ್ತು ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.
ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು, ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು.
ಪ್ರಸ್ತುತ ಕಾಲಮಾನದಲ್ಲಿ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೇಂದು ಡಾ ಅಂಬಾರಾಯ ಅಷ್ಠಗಿ ಯವರು ಪ್ರಾರ್ಥಿಸಿದ್ದಾರೆ.