ಲಕ್ಷ್ಮಣ್ ಬೆಂಬಲಿಸುವಂತೆ ಮರಿತಿಬ್ಬೇಗೌಡ ಮನವಿ
ಸಂಜೆವಾಣಿ ನ್ಯೂಸ್
ಮೈಸೂರು: ಏ.23:- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕೊಡಗು ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಹಾಗೂ ಸುನೀಲ್ ಬೋಸ್ ಅವರಿಗೆ ಮತ ನೀಡಿ ಗೆಲ್ಲಿಸಬೇಕೆಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಮಾಜಿ ಶಾಸಕ ಮರಿತಿಬ್ಬೇಗೌಡ ಮತದಾರರಲ್ಲಿ ಮನವಿ ಮಾಡಿದರು.
ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಮುಖ್ಯಮಂತ್ರಿಗ ಸಿದ್ದರಾಮಯ್ಯನವರು ಮೊದಲನೆ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಎರಡನೇ ಬಾರಿಗೆ 10 ತಿಂಗಳ ಅವಧಿಯಲ್ಲಿ ಚುನಾವಣಾ ಪೂರ್ವದಲ್ಲಿ ಕೊಟ್ಟ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದರು.
ಮೈಸೂರು-ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. 2024-25ನೇ ಸಾಲಿನ ಬಜೆಟ್‍ನಲ್ಲಿ ಗ್ಯಾರಂಟಿಗಳಿಗೆ 53 ಸಾವಿರ ಕೋಟಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ 89 ಸಾವಿರ ಕೋಟಿ ಹಣವನ್ನು ನಿಗಧಿಗೊಳಿಸಿದೆ. ಆದರೆ ಐದು ಗ್ಯಾರಂಟಿಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದರು.
ಅಲ್ಲದೆ, ಈ ಹಿಂದೆ ಸದನದಲ್ಲಿ ಮಹರಾಣಿ ಕಾಲೇಜು ಕುಸಿದಿದ್ದ ವಿಚಾರವನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪ ಮಾಡಿದ್ದು ಮಹಿಳಾ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದಂತೆ ಅನುದಾನ ಬಿಡುಗಡೆ ಮಾಡುವಂತಹ ಕೆಲಸ ಮಾಡಿರುವುದು ವಿಶೇಷವಾಗಿದೆ. ಗ್ಯಾರಂಟಿ ಯೋಜನೆ ಬಗ್ಗೆ ಟಿಕೇ ಮಾಡುತ್ತಿರುವವರು ತಾವು ಕೂಡ ಫಲಾನುಭವಿಗಳಾಗಿರುವುದನ್ನು ಮರೆಯಬಾರದು ಎಂದು ಹೇಳಿದರು.
ಬಳಿಕ, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಜಿ, ರಾಹುಲ್ ಅವರ ನೇತೃತ್ವದಲ್ಲಿ ಈ ಬಾರಿ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರೆಂಟಿಗಳನ್ನು ರಾಷ್ಟ್ರದ ಮತದಾರರಿಗೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.
ಅಲ್ಲದೆ, ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಮಹಾv ಗಾಂಧೀಜಿಯವರ ತತ್ವಸಿದ್ಧಾಂತಗಳ ಆಧಾರದ ಮೇಲೆ ರೂಪಿತವಾದ ಸಂವಿಧಾನದ ಸದಾಶಯದಂತೆ ಎಲ್ಲಾ ಸಮುದಾಯದ ಪ್ರತಿ ಕುಟುಂಬಕ್ಕೂ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಪಕ್ಷ ಜಾರಿಗೊಳಿಸಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಎಂ. ಲಕ್ಷಣ ಮತ್ತು ಚಾಮರಾಜನಗರ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಮತ ನೀಡಬೇಕೆಂದು ಮನವಿ ಮಾಡಿದರು
ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು ಇದ್ದರು.