ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ: ಸಚಿವ ಲಾಡ್ ವಿಶ್ವಾಸ
ವಿಜಯಪುರ, ಏ.21:ಬಿಜೆಪಿ ಬರೀ ಸುಳ್ಳು ಪ್ರಚಾರ ಮಾಡಿ ಚುನಾವಣೆಯಲ್ಲಿ ಗೆಲ್ಲಲು ಹೊರಟಿದೆ. ಆದರೆ ಬಿಜೆಪಿ ಸುಳ್ಳು ಜನತೆಗೆ ಅರ್ಥವಾಗುತ್ತಿದೆ. ಜನರು ಕಾಂಗ್ರೆಸ್ ಪರ ಇದ್ದಾರೆ. ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸುವುದು ನಿಶ್ಚಿತವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಭಾನುವಾರ ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿ ಕಾರ್ಯಗಳನ್ನು ಚುನಾವಣೆ ವಿಷಯ ಮಾಡಿಕೊಂಡಿಲ್ಲ. ಬರೀ ವಿವಾದ ಹುಟ್ಟು ಹಾಕಿ ಜನರ ಭಾವನೆ ಕೆರಳಿಸಿ ಮತ ಯಾಚನೆಗೆ ಮುಂದಾಗಿದೆ. ಇದರಲ್ಲಿ ಈ ಬಾರಿ ಬಿಜೆಪಿ ಯಶಸ್ವಿ ಆಗುವುದಿಲ್ಲ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಬಡವರಿಗೆ ಹಣ ದೊರೆಯುತ್ತಿದೆ. ಜನರು ಸಂತೋಷದಿಂದ ಇದ್ದಾರೆ. ಹಾಗಾಗಿ ಕಾಂಗ್ರೆಸ್ ನಿಶ್ಚಿತವಾಗಿಯೂ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.
ಅದೇ ರೀತಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಗೆಲವು ಸಾಧಿಸಲಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶದಾದ್ಯಂತ ವಿಸ್ತರಿಸಲಾಗುವುದು ಎಂದರು.
ಗುಜರಾತ್ ದಲ್ಲಿ 13 ಲಕ್ಷ ಮಹಿಳೆಯರು ಕಾಣೆಯಾಗಿದ್ದಾರೆ. ಗುಜರಾತ್ ನಲ್ಲಿ ಪ್ರತಿದಿನ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ವಾಸ್ತವವಾಗಿ ಕೇಂದ್ರ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ಪ್ರಧಾನಿ ಮೋದಿ ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎನ್ನುತ್ತಿರುವುದು ಎಷ್ಟು ಸರಿ ಎಂದರು.
ಹುಬ್ಬಳ್ಳಿಯಲ್ಲಿ ನೇಹಾ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ. ಕಾನೂನಿನ ಪ್ರಕಾರ ಕ್ರಮವಾಗುತ್ತದೆ. ನೇಹಾ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ತಿಳಿಸಿದರು.
ಬಿಜೆಪಿಯವರು ಬರೀ ಧಾರ್ಮಿಕ ವಿಚಾರಗಳನ್ನು ಕೆದಕುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಪ್ರಚಾರಕ್ಕೆ ಹೋದಲೆಲ್ಲ ಜೈ ಶ್ರೀರಾಮ ಎನ್ನುತ್ತಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲವೇ? ಎಂದು ಪ್ರಶ್ನಿಸಿದರು.
ದಿಂಗಾಲೇಶ್ವರ ಸ್ವಾಮಿ ಅವರು ಚುನಾವಣೆಗೆ ನಿಲ್ಲಲು ಕಾಂಗ್ರೆಸ್ ಹಣ ನೀಡಿದ ಬಗ್ಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಆರೋಪ ನನಗೆ ಗೊತ್ತಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅವರನ್ನೇ ಕೇಳಬೇಕು ಎಂದರು.
ಶಾಸಕ ಯತ್ನಾಳ ಬೇರೆಯವರ ವಿರುದ್ಧ ನಿರಾಧಾರವಾಗಿ ಆರೋಪ ಮಾಡುತ್ತಾರೆ. ಮತ್ತೊಬ್ಬರ ಬಗ್ಗೆ ಟೀಕಿಸುವುದನ್ನು ಅವರು ರೂಢಿಸಿಕೊಂಡಿದ್ದಾರೆ ಎಂದು ಟೀಕಿಸಿದರು.
ವಿಜಯಪುರ ಸಂಸದ ರಮೇಶ ಜಿಗಜಿಣಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಜನರು ಬಿಜೆಪಿ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆಲವು ನಿಶ್ಚಿತ ಎಂದರು.
ವಿಜಯಪುರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ, ಶಾಸಕ ವಿಠಲ ಕಟಕದೊಂಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಅಬ್ದುಲ್ ಹಮೀದ ಮುಶ್ರೀಫ್ ಮತ್ತಿತರರು ಇದ್ದರು.