ಯದುವೀರ್‍ಗೆ ಮತ ನೀಡಿ ಗೆಲ್ಲಿಸುವಂತೆ ಮಾಜಿ ಮೇಯರ್‍ಗಳ ಕರೆ
ಸಂಜೆವಾಣಿ ನ್ಯೂಸ್
ಮೈಸೂರು: ಏ.18:- ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಒಡೆಯರ್ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕೆಂದು ಬಿಜೆಪಿ-ಜೆಡಿಎಸ್‍ನ ಮಾಜಿ ಮೇಯರ್‍ಗಳು ಮನವಿ ಮಾಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್ ಸಂದೇಶ್ ಸ್ವಾಮಿ, ಸ್ವಾತಂತ್ರ?ಯ ನಂತರ ರಾಜರ ಆಳ್ವಿಕೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾದ ಸಂದರ್ಭದಲ್ಲಿ ಮೈಸೂರು ಅರಸರು ಮೊದಲಿಗರಾಗಿ ತಮ್ಮ ಸಂಸ್ಥಾನ ಬಿಟ್ಟುಕೊಟ್ಟರು. ದೇಶದಲ್ಲಿ ಇಂದಿಗೂ ಅನೇಕ ರಾಜರುಗಳು ತಮ್ಮ ಆಸ್ತಿಯನ್ನು ಸಾರ್ವಜನಿಕರ ಬಳಕೆಗೆ ನೀಡಿಲ್ಲ. ಮೈಸೂರು ಮಹಾರಾಜರು ತಮ್ಮ ಇಡೀ ಆಸ್ತಿಯನ್ನು ಸಾರ್ವಜನಿಕರ ಬಳಕೆಗೆ ನೀಡಿದ್ದಾರೆ. ಹೀಗಾಗಿ ಮೈಸೂರು ಅರಸರ ಋಣ ತೀರಿಸಲು ಯಾರಿಗೂ ಸಾಧ್ಯವಿಲ್ಲ. ಮೈಸೂರು ದೊಡ್ಡಮಟ್ಟದ ಸಾಧನೆ ಮಾಡಿದೆ ಎಂದರೆ ಅದಕ್ಕೆ ಮೈಸೂರು ಮಹಾರಾಜರೇ ಕಾರಣ ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಸಮಸ್ಯೆಗಳಾಗಿದೆ. ಗ್ಯಾರಂಟಿ ಹೆಸರಿನಲ್ಲಿ ಒಂದು ಕಡೆಯಿಂದ ಕಿತ್ತು ಮತ್ತೆ ಅದನ್ನೇ ಜನರಿಗೆ ಕೊಡುವ ಮೂಲಕ ಪ್ರಚಾರ ಪಡೆಯುತ್ತಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಮುಂದೆ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆ ಏನಿಲ್ಲ. ಮೈಸೂರಿನ ಜನರಿಗೆ ಕೇಂದ್ರ ಸರ್ಕಾರದ ಸಾಧನೆ, ಯೋಜನೆಗಳನ್ನು ತಿಳಿಸುತ್ತೇವೆ. ಮತದಾರರು ಯದುವೀರ್ ಅವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಲಕ್ಷ?ಮಣ್ ಹರಕೆಯ ಕುರಿ: ಮಾಜಿ ಮೇಯರ್ ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಪೌರ ಕಾರ್ಮಿಕರ ಏಳಿಗೆಗಾಗಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅನುಕೂಲಗಳನ್ನು ಕಲ್ಪಿಸಲಾಗಿದೆ. ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಕೊಟ್ಟಿದೆ, ಪೌರಕಾರ್ಮಿಕರ ಸೇವೆಯನ್ನು ಖಾಯಂ ಮಾಡಿದೆ. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಪೌರಕಾರ್ಮಿಕರನ್ನು ಕಡೆಗಣನೆ ಮಾಡಲಾಗಿದೆ. ಹೀಗಿದ್ದರೂ ಮಾಜಿ ಮೇಯರ್ ನಾರಾಯಣ್ ಅವರು ಪೌರಕಾರ್ಮಿಕರು ಕಾಂಗ್ರೆಸ್‍ಗೆ ಬೆಂಬಲಿಸಬೇಕೆಂದು ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ಪೌರಕಾರ್ಮಿಕರು ಕಾಂಗ್ರೆಸ್ ಬೆಂಬಲಿಸಬಾರದು ಎಂದ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ?ಮಣ್ ಹರಕೆಯ ಕುರಿಯಾಗಿದ್ದಾರೆ ಎಂದು ಟೀಕಿಸಿದರು.
ಗ್ಯಾರಂಟಿ ಹಳ್ಳ ಹಿಡಿದಿದೆ: ಮಾಜಿ ಮೇಯರ್ ಆರ್.ಲಿಂಗಪ್ಪ ಮಾತನಾಡಿ, ಯಾವುದೇ ಅಭಿವೃದ್ಧಿಯನ್ನು ಮಾಡದ ಕಾಂಗ್ರೆಸ್, ಗ್ಯಾರಂಟಿ ಹೆಸರಿನಲ್ಲಿ ಮತ ಕೇಳುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ನೀಡಿದ್ದು ಬಿಟ್ಟರೆ ಬೇರೆ ಎಲ್ಲ ಯೋಜನೆಗಳು ಹಳ್ಳ ಹಿಡಿದಿದೆ. ಪಾಲಿಕೆ ಚುನಾವಣೆಯಲ್ಲೂ ಗೆಲ್ಲದ ವ್ಯಕ್ತಿಯನ್ನು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ದೇಶದಲ್ಲಿ ಒಳ್ಳೆಯ ಆಡಳಿತ ನೀಡುವ ಜೊತೆಗೆ ದೇಶವನ್ನು ಉತ್ತಮವಾಗಿ ಮುನ್ನಡೆಸಲು ಮೋದಿ ಅವರ ಕೈ ಬಲಪಡಿಸಬೇಕಿದೆ. ಆದ್ದರಿಂದ ಮೈಸೂರಿನ ಜನತೆ ಯದುವೀರ್ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್‍ಗಳಾದ ರಾಜೇಶ್ವರಿ, ಭಾಗ್ಯವತಿ ಇತರರಿದ್ದರು.