ಕೊಳವೆ ಬಾವಿ ದುರ್ಘಟನೆ ಆಗದಂತೆ ಎಚ್ಚರವಹಿಸಲು ಸೂಚನೆ
ಸಂಜೆವಾಣಿ ವಾರ್ತೆ
ಹೊಸಪೇಟೆ ಏ16: ವಿಫಲಗೊಂಡ ಕೊಳವೆ ಬಾವಿಗಳ ಬಗ್ಗೆ ದುರ್ಘಟನೆ ಆಗದಂತೆ ಎಚ್ಚರವಹಿಸುವ ಮೂಲಕ ಅವುಗಳನ್ನು ಮುಚ್ಚಿಸಲು ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ ಎಚ್ಚರಿಸಿದರು.
ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಹೊಸ ಕೊಳವೆ ಬಾವಿಗಳನ್ನು ಕೊರೆಸಿ, ವಿಫಲವಾದಲ್ಲಿ ಅದಕ್ಕೆ ಮುಚ್ಚಳ ಮುಚ್ಚಿ ಕೇಸಿಂಗ್ ಪೈಪಿಗೆ ಕಟ್ಟೆ ನಿರ್ಮಾಣ ಮಾಡಬೇಕು. ಆಯಾ ಗ್ರಾಪಂ ವ್ಯಾಪ್ತಿಯ ಅಭಿವೃದ್ಧಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಒಂದೊಮ್ಮೆ ನಿರ್ಲಕ್ಷ್ಯ ವಹಿಸಿದರೆ, ಪಿಡಿಒಗಳನ್ನು ಹೊಣೆ ಮಾಡಲಾಗುವುದು ಎಂದರು.
ಜಿಲ್ಲಾಧಿಕಾರಿಗಳ ಎಂ.ಎಸ್.ದಿವಾಕರ್ ಅವರ ಅಧ್ಯಕ್ಷತೆ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ ವಿಫಲ ಕೊಳವೆ ಬಾವಿಗಳನ್ನು ಮುಚ್ಚಿಸಲು ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಪಿಡಿಒ ಮತ್ತು ಗ್ರಾಮ ಠಾಣ ವ್ಯಾಪ್ತಿಯ ಹೊರಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಅಲ್ಲದೆ, ಸಂಬಂಧಿಸಿದ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ ದುರ್ಘಟನೆಗಳು ಜರುಗದಂತೆ ತಡೆಯಬೇಕು ಎಂದರು.
ಬರಗಾಲದ ಹಿನ್ನೆಲೆಯಲ್ಲಿ ಅಂತರ್ಜಲ ಬತ್ತಿರುವ ಕೊಳವೆ ಬಾವಿಗಳಲ್ಲಿ  ಮೋಟಾರ್ ಪಂಪ್ ಹೊರಕ್ಕೆ ತೆಗೆದಿದ್ದರೆ ಮುಚ್ಚಳಿಕೆ ಮುಚ್ಚಿ ಮುಂದಿನ ದಿನಗಳಲ್ಲಿ ಮಳೆಯಾಗಿ ನೀರು ಮರುಪೂರ್ಣವಾದರೆ ಅದನ್ನು ಬಳಸಲು ಬರುವಂತೆ ಸಂರಕ್ಷಿಸುವಂತೆಯೂ ನಿರ್ದೇಶನ ನೀಡಿದರು. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಮತದಾನ ಹೆಚ್ಚಳಕ್ಕೆ ಶ್ರಮಿಸಿ:
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ನಿರಂತರವಾಗಿ ವಿಶಿಷ್ಟವಾದ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಕ್ರಮವಹಿಸಬೇಕಿದೆ.  ರಾಜ್ಯದ ವಿವಿಧ ಭಾಗಗಳಿಗೆ ಗುಳೆ ಹೋಗಿರುವ ಸಂಪೂರ್ಣ ವಿವರ ಪಡೆದು, ಅವರನ್ನು ಸಂಪರ್ಕಿಸಿ ಮತದಾನದಿಂದ ವಂಚಿತರಾಗದಂತೆ ಕ್ರಮ ವಹಿಸಬೇಕಿದೆ.  ಮೂರು ದಿನಗಳೊಳಗೆ ಕಡಿಮೆ ಮತದಾನವಾದ ಮತಗಟ್ಟೆಗಳ ವಿವರವನ್ನು ವರದಿ ನೀಡಬೇಕು. ನರೇಗಾ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ನೀರು, ನೆರಳು ಹಾಗೂ ಸ್ಥಳದಲ್ಲಿ ಆರೋಗ್ಯ ಚಿಕಿತ್ಸೆ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ವಿವಿಧ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.