ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ವಿಡಿಯೋ, ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಪ್ರಕರಣ
ಬೀದರ್,ಸೆ.20-ಜಿಲ್ಲೆಯ ಹುಮನಾಬಾದ ಪಟ್ಟಣದಲ್ಲಿ ಸೆ.19 ರಂದು ನಡೆದ ಧಾರ್ಮಿಕ ಮೆರವಣಿಗೆಯಲ್ಲಿ ಅನ್ಯ ಧರ್ಮೀಯ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಮತ್ತು ರಾಷ್ಟ್ರ ಧ್ವಜಕ್ಕೆ ಅಪಮಾನವಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಹುಮನಾಬಾದ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆದಿದೆ ಎಂದು ಎಸ್‍ಪಿ ಪ್ರದೀಪ್ ಗುಂಟೆ ತಿಳಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಅಪಮಾನವಾಗಿದೆ ಎಂದು ವಿಡಿಯೋದಲ್ಲಿ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಆ ವಿಡಿಯೋದಲ್ಲಿ ಯಾವ ಭಾವುಟವು ಕೂಡ ನಮ್ಮ ಭಾರತ ದೇಶದ ಭಾವುಟಕ್ಕೆ ಹೋಲಿಕೆಯಾಗುವುದಿಲ್ಲ. ಕೆಲ ಕಿಡಗೇಡಿಗಳು ಕಾನೂನು-ಸುವ್ಯವಸ್ಥೆ ಹಾಳು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.