ಬೀದರ್ ಡಿಸಿಸಿ ಬ್ಯಾಂಕ್ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ: ಸಚಿವ ಖಂಡ್ರೆ
ಕಲಬುರಗಿ:ಏ.13: ಬೀದರ್ ಜಿಲ್ಲಾ ಸಹಕಾರ ಬ್ಯಾಂಕ್ ಮೇಲೆ ಕಳೆದ ಶುಕ್ರವಾರ ಆದಾಯ ತೆರಿಗೆ ಇಲಾಖೆಯು ಮಾಡಿದ ದಾಳಿಯು ರಾಜಕೀಯ ಪ್ರೇರಿತವಾಗಿದೆ ಎಂದು ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಆರೋಪಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐವತ್ತು ವರ್ಷಗಳಿಂದಲೂ ಆಗದ ದಾಳಿ ಚುನಾವಣೆಯ ಸಂದರ್ಭದಲ್ಲಿಯೇ ಏಕಾಯಿತು? ಎಂದು ಖಾರವಾಗಿ ಪ್ರಶ್ನಿಸಿದರು.
ಬೀದರ್ ಜಿಲ್ಲಾ ಸಹಕಾರ ಬ್ಯಾಂಕ್ ವ್ಯಾಪ್ತಿಯಲ್ಲಿ ಮೂರು ಲಕ್ಷ ರೈತರು ಸದಸ್ಯರಿದ್ದಾರೆ. ಅವರಿಗೆಲ್ಲರಿಗೂ ಈ ಸಂದರ್ಭದಲ್ಲಿ ಸಮಸ್ಯೆ ಆಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಬ್ಯಾಂಕಿನಲ್ಲಿ ಯಾವುದೇ ರೀತಿಯಲ್ಲಿ ಹಣಕಾಸು ವ್ಯವಹಾರವೇ ಆಗದೇ ಇರುವಾಗ ದಾಳಿಯ ಅಗತ್ಯವೇನಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನನ್ನ ಪುತ್ರ ಅಮರ್ ಖಂಡ್ರೆಯವರು ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಕ್ಷೇತ್ರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಳೆದ ಹತ್ತು ವರ್ಷಗಳಿಂದಲೂ ಅಭಿವೃದ್ಧಿ ಕುರಿತು ನಿರ್ಲಕ್ಷ್ಯ ವಹಿಸಿದ ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಮತ್ತೆ ಬಿಜೆಪಿ ಅಭ್ಯರ್ಥಿಯಾಗಿದ್ದು, ಕ್ಷೇತ್ರದ ಜನರು ನಿರ್ಲಕ್ಷಿಸುತ್ತಿದ್ದಾರೆ. ಅವರ ಪಕ್ಷದಲ್ಲಿಯೇ ಭಗವಂತ್ ಖೂಬಾ ಅವರ ವಿರುದ್ಧ ಕಾರ್ಯಕರ್ತರು ಹಾಗೂ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಐಟಿ ದಾಳಿಯನ್ನು ಒಂದು ರೀತಿಯಲ್ಲಿ ಅಸ್ತ್ರವನ್ನಾಗಿ ಮಾಡಿಕೊಂಡಿದೆ ಎಂದು ಅವರು ದೂಷಿಸಿದರು.
ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ, ವರಿಷ್ಠರಾದ ಶ್ರೀಮತಿ ಸೋನಿಯಾಗಾಂಧಿ, ರಾಹುಲ್‍ಗಾಂಧಿ ಅವರು ಕೇಂದ್ರ ಬಿಜೆಪಿ ಸರ್ಕಾರವು ಐಟಿ, ಸಿಬಿಐ ಮುಂತಾದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ನಿರಂತರವಾಗಿ ಆರೋಪಿಸಿದ್ದಾರೆ. ಅದೇ ಬಿಜೆಪಿ ಸಮರ್ಥಕರಿದ್ದವರು ಮಾತ್ರ ಅಮಾಯಕರು. ಅವರ ಸಂಸ್ಥೆಗಳ ಮೇಲೆ ದಾಳಿಗಳು ಮಾಡುವುದಿಲ್ಲ ಎಂದು ಅವರು ತೀವ್ರ ಆಕ್ರೋಶ ಹೊರಹಾಕಿದರು.
ನನ್ನ ಸಹೋದರ ಅಮರ್ ಖಂಡ್ರೆಯವರು ಬೀದರ್ ಜಿಲ್ಲಾ ಸಹಕಾರ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಕಳೆದ ಮೂರು ತಿಂಗಳು ಹಿಂದೆಯೇ ಆಯ್ಕೆಯಾಗಿದ್ದಾರೆ. ಹೀಗಾಗಿ ಬಿಜೆಪಿಯವರಿಗೆ ಇದು ದ್ವೇಷಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಯಲ್ಲಿಯೂ ಸಹ ಬಿಜೆಪಿ ಅಭ್ಯರ್ಥಿಗೆ ಬೆಂಬಲ ದೊರಕುತ್ತಿಲ್ಲ. ಹೀಗಾಗಿ ಇಂತಹ ದಾಳಿಗಳ ಮೂಲಕ ಜನರ ಮನಸ್ಸು ಬೇರೆಡೆ ಸೆಳೆಯುವಂತಹ ಕುತಂತ್ರವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ದೂರಿದರು.
ವಿರೋಧ ಪಕ್ಷಗಳಲ್ಲಿ ಇದ್ದ ಭ್ರಷ್ಟರು ಬಿಜೆಪಿಗೆ ಹೋದರೆ ಅವರು ಭ್ರಷ್ಟಾಚಾರದಿಂದ ಮುಕ್ತಗೊಳ್ಳುತ್ತಾರೆ ಎಂದು ಆರೋಪಿಸಿದ ಅವರು, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷಗಳಿಗೆ ಹೆದರಿಸುವ, ನಿಯಂತ್ರಿಸುವಂತಹ ಕಾರ್ಯದಲ್ಲಿ ತೊಡಗುವ ಮೂಲಕ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ಬೀದರ್ ಹಾಗೂ ಕಲಬುರ್ಗಿ ಲೋಕಸಭಾ ಕ್ಷೇತ್ರಗಳೆರಡರಲ್ಲಿಯೂ ಸಹ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವವರು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ಆಳಂದ್ ಶಾಸಕ ಬಿ.ಆರ್. ಪಾಟೀಲ್, ಸಚಿವ ಕೆ. ರಹೀಂಖಾನ್, ಮಾಜಿ ಮಹಾಪೌರ ಡಾ. ಶರಣಕುಮಾರ್ ಮೋದಿ ಅವರು ಉಪಸ್ಥಿತರಿದ್ದರು.