ಸೆ.೨೨ ರಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಜನ್ಮದಿನಾಚರಣೆಯ ಹಬ್ಬ: ಸಂಸದೆ ಡಾ.ಪ್ರಭಾ ಮಾಹಿತಿ
ಸಂಜೆವಾಣಿ ವಾರ್ತೆ
ದಾವಣಗೆರೆ.ಸೆ.೨೦: ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ 57ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ಸೆಪ್ಟೆಂಬರ್ 22 ರಂದು ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು ಕಾರ್ಯಕ್ರಮಕ್ಕೆ ಅನೇಕ ಮುಖಂಡರು ಆಗಮಿಸಲಿದ್ದಾರೆ. ಇದೇ ವೇಳೆ ಮತದಾರರಿಗೆ ಕೃತಜ್ಞತಾ ಕಾರ್ಯಕ್ರಮ ಕೂಡ ಏರ್ಪಡಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ತಮ್ಮ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಸಚಿವ ಮಲ್ಲಿಕಾರ್ಜುನ್ ಅವರು ದೀಪ ಬೆಳಗಿಸುವ ಮೂಲಕ ಜನ್ಮದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣರಾದ ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಅಭಿನಂದಿಸಲಾಗುವುದು ಎಂದರು.ಈಗಾಗಲೇ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆವರಗೆರೆಯಲ್ಲಿರುವ ಗೋಶಾಲೆಯಲ್ಲಿ ಗೋವುಗಳಿಗೆ ಮೇವು ವಿತರಣೆ ಮಾಡಲಾಗಿದೆ.ಐಎಂಎ ಹಾಲ್, ವಿನೋಬಾನಗರದ ಶ್ರೀ ಶಂಭುಲಿAಗೇಶ್ವರ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ನಡೆಸಲಾಗಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ರಕ್ತದಾನ ಮಾಡಿ ಅನೇಕರ ಜೀವ ಉಳಿಸುವ ಕೆಲಸ ಮಾಡಿದ್ದಾರೆ.ಮಲ್ಲಿಕಾರ್ಜುನ್ ಅವರ 55 ನೇ ಜನ್ಮ ದಿನಾಚರಣೆ ಅಂಗವಾಗಿ ಕಳೆದ ವರ್ಷ ಹಮ್ಮಿಕೊಂಡಿದ್ದ 5555 ಯುನಿಟ್ ರಕ್ತದಾನ ಸಂಗ್ರಹ ಅಭಿಯಾನದಲ್ಲಿ ಇದುವರೆಗೂ 3500 ಯುನಿಟ್ ಸಂಗ್ರಹಿಸಿ ಅಗತ್ಯ ಇರುವವರಿಗೆ ಉಚಿತವಾಗಿ ನೀಡಲಾಗಿದೆ. ಗುರಿಯಂತೆ 5555 ಯುನಿಟ್ ಸಂಗ್ರಹವಾಗುವರೆಗೂ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ಮಲ್ಲಿಕಾರ್ಜುನ್ ಅವರು ಮೂರು ಬಾರಿ ಸಚಿವರಾಗಿ ದಾವಣಗೆರೆ ನಗರ ಮತ್ತು ಜಿಲ್ಲೆಯನ್ನು ಭಾರತದ ಭೂಪಟದಲ್ಲಿ ಗುರುತಿಸುವಂತಹ ಅಭಿವೃದ್ಧಿ ಮಾಡಿದ್ದು, ಅವರ ಸೇವೆ ಇನ್ನಷ್ಟು ದಾವಣಗೆರೆ ನಗರಕ್ಕೆ ಸಿಗಲಿ ಎಂದು ಆಶಿಸಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು, ಸಂಘ- ಸಂಸ್ಥೆಗಳು, ಮಹಿಳಾ ಸ್ವ ಸಹಾಯ ಸಂಘಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು ಹಾಗೂ ಮಲ್ಲಿಕಾರ್ಜುನ್ ಅವರ ಅಭಿಮಾನಿಗಳು ದಾವಣಗೆರೆ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯಕ್ಕೆ ಆಗಮಿಸಿ ಯಶಸ್ವಿಗೊಳಿಸಲು ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಪಾಲಿಕೆ ಸದಸ್ಯರಾದ ಎ.ನಾಗರಾಜ್, ಗಡಿಗುಡಾಳ್ ಮಂಜುನಾಥ್, ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮುಖಂಡರಾದ ಕೆ.ಜಿ.ಶಿವಕುಮಾರ್, ಹದಡಿ ನಿಂಗಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮುದೇಗೌಡರ ಗಿರೀಶ್, ಹಾಲೇಶ್ ಗೌಡ, ಎಲ್‌ಎಂಎಚ್.ಸಾಗರ್ ಇತರರು ಉಪಸ್ಥಿತರಿದ್ದರು.
—