ಜಿಲ್ಲಾ ಚುನಾವಣಾಧಿಕಾರಿಯಿಂದ ಚುನಾವಣಾ ಅಧಿಸೂಚನೆ
ಕಲಬುರಗಿ,ಏ.12:ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಸಾರ್ವತ್ರಿಕ ಚುನಾವಣೆಗೆ ಇಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ.
ಚುನಾವಣಾ ಅಧಿಸೂಚನೆ ಪ್ರಕಾರ ಇಂದಿನಿಂದ (ಏಪ್ರಿಲ್ 12) 19 ರ ವರೆಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಥವಾ ಸಹಾಯಕ ಚುನಾವಣಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಬಹುದಾಗಿದೆ.
ಏಪ್ರಿಲ್ 20 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ 22 ರಂದು ಮಧ್ಯಾಹ್ನ 3 ಗಂಟೆ ಒಳಗಾಗಿ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಇನ್ನು ಚುನಾವಣೆಗೆ ಸ್ಫರ್ಧೆ ನಡೆದ ಸಂದರ್ಭದಲ್ಲಿ ಮೇ 7 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.