ಲೋಕಸಭಾ ಚುನಾವಣೆ:ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರೀ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ

ರಾಯಚೂರು, ಏ.೧೨-ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಹಿನ್ನಲೆ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಭಾರೀ
ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಲೋಕಸಭಾ ಚುನಾವಣೆ ಅತ್ಯಂತ ಮಹತ್ವದ ಹಿನ್ನಲೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭಗೊಂಡು ಅಂತಿಮ ದಿನದ ವರೆಗೂ ಚುನಾವಣೆ ನಿಯಮವನ್ನು ಉಲ್ಲಂಘನೆ ಮಾಡದಂತೆ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮವಾಗಿ ಭಾರೀ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯನ್ನು ಎದುರಿಸಲು
ಜಿಲ್ಲಾಧಿಕಾರಿ ಕಚೇರಿ ಆವರಣ ಮತ್ತು ಸುತ್ತಮುತ್ತ ಪ್ರದೇಶದಲ್ಲಿ ಅರಸೇನಾ ಪಡೆ ಸೇನೆಯನ್ನು ನಿಯೋಜಿಸಲಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಶಾಂತಿಯುತ ಪಾರದರ್ಶಕವಾಗಿ ನಡೆಸಲು ಈಗಾಗಲೇ ಜಿಲ್ಲಾಡಳಿತ ಭಾರೀ ಸಿದ್ದತೆ ಕೈಗೊಂಡಿದೆ. ಮೇ.೭ರಂದು ನಡೆಯುವ ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಚುನಾವಣೆ ನಿಯಮಗಳನ್ನು ಉಲ್ಲಂಘಿಸದಂತೆ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.
ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿಗಳ ಕೊಠಡಿಗೆ ಅಭ್ಯರ್ಥಿ ಸೇರಿದಂತೆ ಗರಿಷ್ಠ ೫ ಜನರಿಗೆ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ. ಕಚೇರಿಯ ೧೦೦ ಮೀಟರ್ ವ್ಯಾಪ್ತಿಯ ಮುಖ್ಯದ್ವಾರದವರೆಗೆ ಉಮೇದುವಾರಿಕೆಯ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ ೩ ವಾಹನ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ನಿಗದಿತ ಅವಧಿಯಲ್ಲಿ ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೩ ಗಂಟೆ ಅವಧಿಯೊಳಗೆ ನಾಮಪತ್ರ ಸಲ್ಲಿಸಬಹುದು. ಏ. ೨೦ರಂದು ಬೆಳಿಗ್ಗೆ ೧೧ಕ್ಕೆ ನಾಮಪತ್ರಗಳ ಪರಿಶೀಲನೆ, ೨೨ರಂದು ಮಧ್ಯಾಹ್ನ ೩ರ ತನಕ ನಾಮಪತ್ರ ವಾಪಸ್ ಪಡೆಯಲು ಅವಕಾಶವಿದೆ. ಜಿಲ್ಲೆಯಲ್ಲಿ ಬಿಸಲಿನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚಳ ಹಿನ್ನಲೆ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರಿಗೆ ನೆರಳಿನ ವ್ಯವಸ್ಥೆ ಮಾಡಲಾಗುತ್ತಿದೆ. ಸದರ ಬಜಾರ್ ಪೊಲೀಸ್ ಠಾಣೆ ಪಿಎ ಉಮ್ಮೇಶ ಕಾಂಬ್ಳೆ ಮತ್ತು ನಗರಸಭೆ ಆಯುಕ್ತ ಚಲಪತಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಂದ್ ಪೊಲೀಸ್ ಬಂದ್ ಬಸ್ತ್ ಪರಿಶೀಲನೆ ನಡೆಸಿದರು.