ರಾಜ್ಯದ 28 ಸ್ಥಾನಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ. 12- ಜನರ ಆಶೀರ್ವಾದಿಂದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ರಾಮ ಸಮುದ್ರ 30ನೇ ವಾರ್ಡ್‍ನ ಡಾ.ಬಾಬುಜಗಜೀವನರಾಂ ಬಡಾವಣೆಯಲ್ಲಿ ಶಾಸಕರು, ಪಕ್ಷದ ಮುಖಂಡರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್‍ಬೋಸ್ ಪರ ಮತಯಾಚಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಪ್ರಣಾಳಿಕೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ರಾಜ್ಯದ ಜನತೆಗೆ ಅನುಕೂಲ ಮಾಡಿಕೊಟ್ಟಿದೆ. ನುಡಿದಂತೆ ನಡೆಯುವ ಮೂಲಕ ಜನರ ವಿಶ್ವಾಸವನ್ನು ಗಳಿಸಿದೆ, ಜನರ ವಿಶ್ವಾಸದಿಂದ ಮೈಸೂರು-ಕೊಡುಗು, ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಸೇರಿದಂತೆ ರಾಜ್ಯದ 28 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು.
ಏ.26ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಅತ್ಯಧಿಕ ಮತಗಳಿಂದ ಜಯಶೀಲರನ್ನಾಗಿ ಮಾಡಿತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ವಾಲ್ಮೀಕಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಸ್.ಬಸವರಾಜು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ ಮಾಜಿ ನಿರ್ದೇಶಕ ಎಂ.ಶಿವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್‍ಅಸ್ಗರ್, ಎಚ್.ವಿ.ಚಂದ್ರು, ಆರ್.ಕೆ.ಶಿವಕುಮಾರ್, ರಾಚಯ್ಯ ಇತರರು ಹಾಜರಿದ್ದರು.