ಲೋಕಸಭಾ ಚುನಾವಣೆ: ಸ್ವೀಪ್ ಸಮಿತಿಯಿಂದಹೊಸಪೇಟೆಯಲ್ಲಿ ಮತದಾನ ಜಾಗೃತಿ ಅಭಿಯಾನ
ಹೊಸಪೇಟೆ, ಏಪ್ರೀಲ್ 10 ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ವೈದ್ಯಕೀಯ ಸಂಘ ಹೊಸಪೇಟೆ ಇವರ ಸಹಯೋಗದಲ್ಲಿ ಏಪ್ರೀಲ್ 8ರಂದು ಮತದಾರರ ಜಾಗೃತಿ ಅಭಿಯಾನ ನಡೆಯಿತು.
ಮತದಾನ ಜಾಗೃತಿ ಅಭಿಯಾನದ ಜಾಥಾವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸರ್ಕಲ್‍ನಿಂದ ಆರಂಭಗೊಂಡು 4ನೇ ವಾರ್ಡ್, ಪಟೇಲ್ ನಗರ, 3ನೇ ವಾರ್ಡ್ ಸೇರಿದಂತೆ ವಿವಿಧೆಡೆ ಸಂಚರಿಸಿ ಡಾ.ಪುನೀತ್ ರಾಜ್‍ಕುಮಾರ್ ವೃತ್ತಕ್ಕೆ ಬಂದು ತಲುಪಿತು.
ನಿಮ್ಮ ಮತ ನಿಮ್ಮ ಹಕ್ಕು, ಕಡ್ಡಾಯವಾಗಿ ಮತದಾನ ಮಾಡಿ, ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು, ಶತ ಪ್ರತಿಶತ ಮತದಾನ ವಿಜಯನಗರ ಜಿಲ್ಲೆಯ ವಾಗ್ದಾನ ಎನ್ನುವ ಘೋಷಣೆಗಳನ್ನು ಹಾಕಿ ಮತದಾರರಲ್ಲಿ ಮತದಾನ ಜಾಗೃತಿಯನ್ನು ಮೂಡಿಸಲಾಯಿತು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಜಾಥಾಕ್ಕೆ ಚಾಲನೆ ನೀಡಿದರು. ಕಳೆದ ಚುನಾವಣೆಗಳಲ್ಲಿ ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಮತದಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತದಾರರ ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದು ಸಿಇಓ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಂಕರ್ ನಾಯ್ಕ ಎಲ್.ಆರ್., ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ.ಶ್ರೀನಿವಾಸ ದೇಶಪಾಂಡೆ, ಕಾರ್ಯದರ್ಶಿ ಡಾ.ರಾಜೀವ್ ಹಾಗು ಹೊಸಪೇಟೆ ನಗರದ ಖಾಸಗಿ ಆಸ್ಪತ್ರೆಗಳ ವೈದ್ಯರು, ನಗರ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ತಾಲೂಕು ಪಂಚಾಯತಿ ಸಿಬ್ಬಂದಿ, ಆಶಾ ಕಾರ್ಯಕರ್ತರು, ಅಂಗನವಾಡಿ ಮತ್ತು ಹೊಸಪೇಟೆಯ ನರ್ಸಿಂಗ್ ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮತದಾನ ಜಾಗೃತಿ ಅಭಿಯಾನದಲ್ಲಿ ಭಾಗಿಯಾಗಿದ್ದರು.