ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಮೀನಾ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.10:- ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸುನ ನಿಟ್ಟಿನಲ್ಲಿ ಜಾರಿಯಾಗಿರುವ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಪಿ.ಸಿ. ಮೀನಾ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚುನಾವಣೆಯ ವಿವಿಧ ಪ್ರಕ್ರಿಯೆಗಳ ಕುರಿತು ಪೂರ್ವ ಸಿದ್ದತೆಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳು, ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಕ್ಷೇತ್ರವ್ಯಾಪ್ತಿಯಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಯಾವುದೇ ಚುನಾವಣಾ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟೆಚ್ಚೆರ ವಹಿಸಬೇಕು. ಚುನಾವಣಾ ಅಕ್ರಮಕ್ಕೆ ಕಾರಣವಾಗುವಂತಹ ಯಾವುದೇ ಪ್ರಕರಣಗಳಿಗೆ ಕಂಡು ಬಂದರೂ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಬೇಕು. ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಯನ್ನು ನಿರ್ವಹಿಸಲು ಮುಂದಾಗಬೇಕು ಎಂದರು.
ವೆಚ್ಚ ವೀಕ್ಷಕರಾದ ಎಂ. ಮೋಹನ್ ಬಾಬು ಅವರು ಮಾತನಾಡಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ವೆಚ್ಚದ ಬಗ್ಗೆ ಪ್ರತಿದಿನ ನಿಗಾ ವಹಿಸಿ ವರದಿ ಸಲ್ಲಿಸಬೇಕು. ಚುನಾವಣಾ ಕರ್ತವ್ಯಕ್ಕಾಗಿ ನಿಯೋಜಿತರಾಗಿರುವ ಎಸ್.ಎಸ್.ಟಿ ಹಾಗೂ ಎಸ್.ಎಫ್.ಟಿ ತಂಡ, ಇನ್ನಿತರೆ ತಂಡಗಳು ಅತ್ಯಂತ ಜವಾಬ್ದಾರಿಯುತವಾಗಿ ತಮಗೆ ವಹಿಸಿರುವ ಕೆಲಸ ನಿರ್ವಹಿಸಿ ಅಧಿಕಾರಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದರು.
ಪ್ರತಿದಿನದ ಚುನಾವಣಾ ವೆಚ್ಚದ ವರದಿ ನೀಡಬೇಕು. ಅಧಿಕೃತವಾಗಿ ಮದ್ಯ ಸಾಗಾಣಿಕೆ ಬಗ್ಗೆ ವಿವಿಧ ತಂಡಗಳು ಹೆಚ್ಚು ಗಮನ ಹರಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆಯವರು ಅಕ್ರಮ ಮದ್ಯ ಸಾಗಣೆ, ಸಂಗ್ರಹಣೆಯಾಗದಂತೆ ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ವೆಚ್ಚ ವೀಕ್ಷಕರಾದ ಎಂ. ಮೋಹನ್ ಬಾಬು ಅವರು ತಿಳಿಸಿದರು.
ಇದೇ ವೇಳೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಇದುವರೆಗೆ ಚುನಾವಣಾ ಸಿದ್ದತೆಗಾಗಿ ಕೈಗೊಂಡಿರುವ ವಿವಿಧ ಪ್ರಕ್ರಿಯೆಗಳನ್ನು ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಗೆ ಪವರ್ ಪಾಯಿಂಟ್ ಮೂಲಕ ಸುಧೀರ್ಘವಾಗಿ ವಿವರಿಸಿ ಮನವರಿಕೆ ಮಾಡಿದರು.
ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ತಂಡಗಳ ಅಧಿಕಾರಿಗಳು ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳಿಗೆ ನಿಗಧಿಯಾಗಿರುವ ಚುನಾವಣಾ ವೆಚ್ಚದ ಕುರಿತು ಕ್ರಮಬದ್ಧವಾದ ಲೆಕ್ಕಪತ್ರಗಳ ನಿರ್ವಹಣೆ ಮಾಡಬೇಕು. ಯಾವುದೇ ಗೊಂದಲಗಳಿಗೆ ಅಸ್ಪದವಾಗಬಾರದು. ಎಕ್ಸ್‍ಪೆಂಡಿಚರ್ ತಂಡದ ಅಧಿಕಾರಿಗಳು ಶ್ಯಾಡೋ ರಿಜಿಸ್ಟರ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಿಗೆ ಪ್ರಚಾರಕ್ಕಾಗಿ ಅನುಮತಿ ನೀಡಲು ತೆರೆಯಲಾಗಿರುವ ಏಕಗವಾಕ್ಷಿ ಕೇಂದ್ರ ನಿರ್ವಹಣೆಯ ಬಗ್ಗೆಯೂ ಸಹ ನಿಗಾ ವಹಿಸಬೇಕು. ಸಾಮಾನ್ಯ ಹಾಗೂ ವೆಚ್ಚ ವೀಕ್ಷಕರು ನೀಡಿರುವ ಸಲಹೆ, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.