ಮತದಾನ ಜಾಗೃತಿ ;ಗಮನ ಸೆಳೆದ ವಿಕಲಚೇತನರ ಬೈಕ್ ರ್ಯಾಲಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಏ.೭: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನದ ಬಗ್ಗೆ ಅರಿವು ಮೂಡಿಸಲು  ಗ್ರಾಮೀಣ, ನಗರ ಹಾಗೂ ತಾಲ್ಲೂಕು ವಿವಿದ್ಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನರಿಂದ ಏರ್ಪಡಿಸಿದ್ದ ವಿಕಲಚೇತನರ ಬೈಕ್ ರ್ಯಾಲಿ ಗಮನ ಸೆಳೆಯಿತು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಓನಕೆ ಓಬವ್ವ ವೃತ್ತದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಅಂಗವಾಗಿ ಮತದಾನ ಜಾಗೃತಿ ಸಂಬಂಧ ಹಮ್ಮಿಕೊಂಡಿದ್ದ ವಿಕಲಚೇತನರ ಬೈಕ್ ರ್ಯಾಲಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ವಿಕಲಚೇತನರ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಹಾಗೂ ಅರ್ಹ ಮತದಾರರು ಯಾರೂ ಕೂಡ ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು ಎಂಬ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅಂಗವಿಕಲ ಮತದಾರರು, ಯುವ ಮತದಾರರು, ಮಹಿಳಾ ಮತದಾರರು ಸೇರಿದಂತೆ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದ್ದು, ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಲಾಗುತ್ತಿದೆ ಎಂದರು.