ಚುನಾವಣಾ ಕಾರ್ಯಕ್ಕೆ ಮಕ್ಕಳನ್ನು ಬಳಸಿಕೊಳ್ಳದಂತೆ ಡಿ.ಸಿ. ಆದೇಶ
ಕಲಬುರಗಿ:ಏ.6:ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದ್ದು, ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರು ಆದ ಕಲಬುರಗಿ ಜಿಲ್ಲಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಆದೇಶಿಸಿದ್ದಾರೆ.
ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.