ಎತ್ತಿನಗಾಡಿಯಲ್ಲಿ ಕೈ ಶಕ್ತಿ ಪ್ರದರ್ಶನ: ಎಸ್‌ಪಿಎಂ ನಾಮಪತ್ರ ಸಲ್ಲಿಕೆ
ತುಮಕೂರು, ಏ. ೪- ರಾಜ್ಯದಲ್ಲಿ ಮೊದಲ ಹಂತದಲ್ಲಿ ಏ. ೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಅವರು ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನ ನಡೆಸುವ ಮೂಲಕ ಬಿ ಫಾರಂನೊಂದಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ನಗರದ ಬಿಜಿಎಸ್ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ಮತ್ತು ಎತ್ತಿನಗಾಡಿಯಲ್ಲಿ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡರಿಗೆ ಸಚಿವರಾದ ಡಾ. ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಎಸ್.ಆರ್. ಶ್ರೀನಿವಾಸ್, ಡಾ. ರಂಗನಾಥ್, ಹೆಚ್.ವಿ. ವೆಂಕಟೇಶ್, ಕೆ. ಷಡಕ್ಷರಿ, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಮಾಜಿ ಶಾಸಕ ಡಾ. ರಫೀಕ್‌ಅಹಮದ್, ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ಕಲ್ಲಹಳ್ಳಿ ದೇವರಾಜು ಸೇರಿದಂತೆ ಪಕ್ಷದ ವಿವಿಧ ಘಟಕಗಳ ಮುಖಂಡರುಗಳು ಪಾಲ್ಗೊಂಡು, ಮುದ್ದಹನುಮೇಗೌಡರ ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಿದರು.
ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನದ ಈ ಬೃಹತ್ ಮೆರವಣಿಗೆಯು ಅಶೋಕ ರಸ್ತೆಯಲ್ಲಿ ಚರ್ಚ್ ಸರ್ಕಲ್ ಮೂಲಕ ಸಾಗಿ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಅಂತ್ಯಗೊಂಡಿತು. ಅಲ್ಲಿಂದ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ, ಸಚಿವರಾದ ಡಾ. ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ಟಿ.ಬಿ. ಜಯಚಂದ್ರ, ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಶುಭಕಲ್ಯಾಣ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ರೋಡ್ ಶೋನಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸರಳ ಸಜ್ಜನಿಕೆಯ ವ್ಯಕ್ತಿಯಾಗಿರುವ ಹಾಗೂ ಈಗಾಗಲೇ ೫ ವರ್ಷಗಳ ಸಂಸದರಾಗಿ ಜಿಲ್ಲೆಯ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿರುವ ಎಸ್.ಪಿ. ಮುದ್ದಹನುಮೇಗೌಡರನ್ನು ಈ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಸಜ್ಜನ ರಾಜಕಾರಣಿ, ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಂಸತ್‌ನಲ್ಲಿ ಧ್ವನಿ ಎತ್ತಿದವರು. ಬಿಜೆಪಿಯ ಅಭ್ಯರ್ಥಿ ಸೋಮಣ್ಣ ತುಮಕೂರಿನವರಲ್ಲ. ಹೊರಗಿನವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಸಂಸದ ಬಸವರಾಜ್ ಅವರು ಸಂಸತ್‌ನಲ್ಲಿ ಒಮ್ಮೆಯೂ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಇತರ ಸಮಸ್ಯೆಗಳ ಬಗ್ಗೆ ಮಾತನಾಡಲಿಲ್ಲ. ಹೊರಗಿನವರನ್ನು ಗೆಲ್ಲಿಸಿದರೆ ಯಾವ ಕೆಲಸ ಮಾಡಲು ಸಾಧ್ಯ. ಸದಾ ಜನರ ಪರವಾಗಿ ನಿಲ್ಲುವ ಮುದ್ದಹನುಮೇಗೌಡರನ್ನು ಜನ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ದೇಶದಲ್ಲಿ ಒಕ್ಕೂಟ ವ್ಯವಸ್ಥೆ, ಪ್ರಜಾಪ್ರಭುತ್ವ ವ್ಯವಸ್ಥೆ ಇದೆ ಎಂಬುದನ್ನು ಕೇಂದ್ರ ಮರೆತಿದೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ಈವರೆಗೂ ಸ್ಪಂದಿಸಿಲ್ಲ. ಅನುದಾನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ಬಾರಿಯ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆ ಎಂದರು.
ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲ. ನಮ್ಮ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರದ ಹಣವನ್ನು ಸಮರ್ಪಕವಾಗಿ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿದೆ. ಇದುವರೆಗೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಇಂತಹ ಬಡವರ ವಿರೋಧಿ ಸರ್ಕಾರಕ್ಕೆ ಈ ಚುನಾವಣೆಯಲ್ಲಿ ಜನತೆ ತಕ್ಕಪಾಠ ಕಲಿಸಬೇಕು ಎಂದು ಕರೆ ನೀಡಿದರು.
ನಮ್ಮ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ೫ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಈಡೇರಿಸಿದೆ. ಇನ್ನು ಹೆಚ್ಚಿನ ಅಭಿವೃದ್ಧಿಗಾಗಿ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಅವರು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ ಮಹಿಳಾ ಕಾರ್ಯಕರ್ತರು, ವೃದ್ಧೆಯರು ಪಾಲ್ಗೊಂಡಿದ್ದು ಕಂಡು ಬಂತು.